ADVERTISEMENT

ಮಲೇರಿಯಾ ಮುಕ್ತ ಜಿಲ್ಲೆಗೆ ಜಿಲ್ಲಾಡಳಿತ ಪಣ

ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 6:22 IST
Last Updated 26 ಏಪ್ರಿಲ್ 2022, 6:22 IST
ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್‌. ಸೆಲ್ವಮಣಿ ಚಾಲನೆ ನೀಡಿದರು.
ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್‌. ಸೆಲ್ವಮಣಿ ಚಾಲನೆ ನೀಡಿದರು.   

ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್, ಸೈಕಲ್ ಕ್ಲಬ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ‘ನವೀನ ವಿಧಾನಗಳ ಬಳಸೋಣ, ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ’ ಎಂಬ ಘೋಷಣೆಯಡಿ ಮಲೇರಿಯಾ ದಿನಾಚರಣೆ ಆಚರಿಸಲಾಗುತ್ತಿದೆ. ಮನುಷ್ಯ ಸೊಳ್ಳೆಯಿಂದ ಹರಡುವ ಮಲೇರಿಯಾ, ಚಿಕೂನ್‌ಗುನ್ಯಾ, ಮೆದುಳು ಜ್ವರ, ಆನೆಕಾಲು ಕಾಯಿಲೆಗಳಿಂದ ವಿಶ್ವದಾದ್ಯಂತ ಲಕ್ಷಾಂತರ ಸಂಖ್ಯೆಯ ಜನರಲ್ಲಿ ಜಾಗೃತಿ ಮೂಡಿಸುವುದರಿಂದ ರೋಗ ನಿಯಂತ್ರಣ ಸುಲಭ. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಬಳಕೆಗೆ ಬಾರದ ಒಡೆದ ಮಡಕೆ, ಪ್ಲಾಸ್ಟಿಕ್ ವಸ್ತುಗಳನ್ನು ಹಾಗೂ ತೆಂಗಿನ ಚಿಪ್ಪು, ಬಾಟಲಿಗಳಲ್ಲಿ ಮಳೆಯ ನೀರು ನಿಲ್ಲದಂತೆ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕುಸಬಿ, ‘ಕಳೆದ ಸಾಲಿನಲ್ಲಿ 25,645 ಜನರ ರಕ್ತ ತಪಾಸಣೆ ನಡೆಸಿ, ತಪಾಸಣೆಯಲ್ಲಿ ಕೆಲವು ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಲಾಗಿತ್ತು. ಮಲೇರಿಯಾ ನಿಯಂತ್ರಿಸಲು ಎಲ್ಲಾ ಹಂತದಲ್ಲಿ ಚಟುವಟಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಿಂದ ಹೊರಟ ಸೈಕಲ್ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಐಎಂಎ ಸಭಾಂಗಣ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.