ADVERTISEMENT

ಜಿಂದಾಲ್‌ನಿಂದ ಮೆಗ್ಗಾನ್ ಆಸ್ಪತ್ರೆಗೆ ಆಮ್ಲಜನಕ: ಸಂಸದ ಬಿ. ವೈ. ರಾಘವೇಂದ್ರ

ಕೋವಿಡ್ ನಿರ್ವಹಣೆಯ ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 11:26 IST
Last Updated 26 ಏಪ್ರಿಲ್ 2021, 11:26 IST
ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ಕೋವಿಡ್ ನಿರ್ವಹಣೆಯ  ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ಕೋವಿಡ್ ನಿರ್ವಹಣೆಯ  ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.   

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಬಳ್ಳಾರಿ ಜಿಲ್ಲೆ ಜಿಂದಾಲ್‌ ಘಟಕದಿಂದ ಪ್ರತಿ ಎರಡು ದಿನಗಳಿಗೊಮ್ಮೆ ಆಮ್ಲಜನಕ ಸರಬರಾಜು ಮಾಡಲಾಗುತ್ತಿದೆ. ಸದ್ಯ ಆಸ್ಪತ್ರೆ ಆವರಣದಲ್ಲಿ 16 ಸಾವಿರ ಲೀಟರ್ ಆಮ್ಲಜನಕ ಸಂಗ್ರಹ ಟ್ಯಾಂಕ್ ಸಿದ್ಧವಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ಕೋವಿಡ್ ನಿರ್ವಹಣೆಗೆ ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 800 ಆಮ್ಲಜನಕ ಹಾಸಿಗೆಗಳು ಸಿದ್ಧವಿವೆ. 250 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯತ್ತಿದ್ದಾರೆ ಎಂದರು.

ADVERTISEMENT

ವೇಗವಾಗಿ ಹರಡುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು. ಕೋವಿಡೇತರ ರೋಗಿಗಳಿಗೆ ಮೆಗ್ಗಾನ್‌ನಲ್ಲಿ ಒದಗಿಸಲಾಗುತ್ತಿರುವ ಚಿಕಿತ್ಸೆಗೆ ಯಾವುದೇ ತೊಂದರೆಯಾಗದಂತೆ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಚಿಕಿತ್ಸೆ ಅಗತ್ಯವಿರುವಕೋವಿಡ್‌ ರೋಗಿಗಳನ್ನು ಮೆಗ್ಗಾನ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ರೋಗ ಲಕ್ಷಣ ಇಲ್ಲದವರನ್ನು ಹೋಂ ಕ್ವಾರೆಂಟೈನ್‌ಗೆ ಕಳುಹಿಸಲಾಗುತ್ತಿದೆ. ನೆರೆಯ ಜಿಲ್ಲೆಗಳಿಂದಲೂ ಹೆಚ್ಚಿನ ಕೋವಿಡ್ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿರುವ ಕಾರಣ ಮೆಗ್ಗಾನ್ ಆಸ್ಪತ್ರೆಯ ಮೇಲೆ ಸ್ವಲ್ಪಮಟ್ಟಿನ ಒತ್ತಡ ಬೀಳುತ್ತಿದೆ. ಮೆಗ್ಗಾನ್‌ನಲ್ಲಿ ಅಮ್ಲಜನಕ ಪೂರೈಕೆಗೆ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರತಿ ದಿನ ಎರಡು ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ನೆರೆಯ ಜಿಲ್ಲೆಗಳ ಸ್ಯಾಂಪಲ್‌ಗಳನ್ನು ಇಲ್ಲಿಯೇ ಪರೀಕ್ಷೆಗೆ ಕಳುಹಿಸುತ್ತಿದ್ದ ಕಾರಣ ಫಲಿತಾಂಶ ಬರಲು ವಿಳಂಬವಾಗುತ್ತಿತ್ತು. ಶೀಘ್ರ ಸಮಸ್ಯೆಗೆ ಪರಿಹಾರ ದೊರಕಲಿದೆ. 24 ತಾಸುಗಳ ಒಳಗೆ ಫಲಿತಾಂಶ ಒದಗಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಮೆಗ್ಗಾನ್‌ನಲ್ಲಿ ಒಂದು ಸಿಟಿ ಸ್ಕ್ಯಾನ್‌ ಲಭ್ಯವಿದೆ. ಅಗತ್ಯ ಬಿದ್ದರೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಸೌಲಭ್ಯ ಪಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೆಗ್ಗಾನ್‌ನಲ್ಲಿ ಅಗತ್ಯ ಮೂಲಸೌಕರ್ಯ ಉತ್ತಮಪಡಿಸಲಾಗಿದೆ. ಈಗಿರುವ ಹಾಸಿಗೆಗಳ ಜತೆ 250 ಹೆಚ್ಚುವರಿ ಆಮ್ಲಜನಕ ಪೂರೈಕೆ ಹಾಸಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಮೆಗ್ಗಾನ್ ಮೇಲಿನ ಒತ್ತಡ ಕಡಿಮೆ ಮಾಡಲು ತಾಲ್ಲೂಕು ಆಸ್ಪತ್ರೆಗಳಲ್ಲಿ ಸೌಕರ್ಯ ಕಲ್ಪಿಸಲಾಗುತ್ತಿದೆ. ಶಿಕಾರಿಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಮ್ಲಜನಕ ಉತ್ಪಾದಿಸಲು ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ 50 ಆಮ್ಲಜನಕ ಪೂರೈಕೆಯ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸ್ತುತ ಅಗತ್ಯವಿರುವಷ್ಟು ವೈದ್ಯಕೀಯ ಸಿಬ್ಬಂದಿ ಇದ್ದಾರೆ. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಯ ವೈದ್ಯರ ಸೇವೆ ಪಡೆದುಕೊಳ್ಳಲಾಗುವುದು ಎಂದರು.

ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್‌. ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಡಿಎಚ್‌ಒ ಡಾ.ರಾಜೇಶ ಸುರಗಿಹಳ್ಳಿ, ‘ಸೂಡಾ’ ಅಧ್ಯಕ್ಷ ಎಸ್‌.ಎಸ್. ಜ್ಯೋತಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.