ADVERTISEMENT

ಶಿವಮೊಗ್ಗ| ದ್ವಿತೀಯ ಪಿಯುಸಿ ಪರೀಕ್ಷೆ; 41 ಕೇಂದ್ರಗಳ ವ್ಯವಸ್ಥೆಗೆ ಡಿ.ಸಿ ಸೂಚನೆ

ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 4:26 IST
Last Updated 18 ಫೆಬ್ರುವರಿ 2026, 4:26 IST
ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳ ಸಭೆ ನಡೆಸಿದರು
ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳ ಸಭೆ ನಡೆಸಿದರು   

ಶಿವಮೊಗ್ಗ: ಫೆಬ್ರುವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ನಗರದಲ್ಲಿ ಮಂಗಳವಾರ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಜಿಲ್ಲೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 19,009 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳು 17,755, ರಿಪೀಟರ್ 871, ಖಾಸಗಿ- 380 ಮತ್ತು ಇಂಪ್ರೂವ್‌ಮೆಂಟ್ ಮೂವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಶಿವಮೊಗ್ಗದಲ್ಲಿ 17, ಭದ್ರಾವತಿ -6, ತೀರ್ಥಹಳ್ಳಿ, ಹೊಸನಗರ ತಲಾ 3, ಸಾಗರ, ಶಿಕಾರಿಪುರ ತಲಾ 5, ಸೊರಬದಲ್ಲಿ ಎರಡು ಸೇರಿದಂತೆ ಒಟ್ಟು 41 ಪರೀಕ್ಷಾ ಕೇಂದ್ರಗಳಿವೆ. ಪ್ರಶ್ನೆ ಪತ್ರಿಕೆ ವಿತರಕ ಮಾರ್ಗಗಳು -12 ಇವೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿ ಸದಸ್ಯ ಸಮಿತಿಯನ್ನು ನೇಮಿಸಿ ಆದೇಶಿಸಿದ್ದು, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ ಎಂದರು.

ADVERTISEMENT

ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ಪರೀಕ್ಷೆಗಳ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡುವ ತ್ರಿ ಸದಸ್ಯ ಸಮಿತಿ ವಾಹನಕ್ಕೆ ಪೊಲೀಸ್ ಸಿಬ್ಬಂದಿ ನೇಮಿಸಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಣೆ ಮಾಡುವ ವಾಹನಕ್ಕೆ ಜಿ.ಪಿ.ಎಸ್ ಅಳವಡಿಸಿ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣೀಕರಿಸಿರುವ ಮತ್ತು ವಿತರಿಸುವ ಬಗ್ಗೆ 24x7 ಸಿ.ಸಿ.ಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅದನ್ನು ಖಚಿತಪಡಿಸಿಕೊಳ್ಳಬೇಕು. ಮಕ್ಕಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇದ್ದು ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿ.ಪಂ ಸಿಇಒ ಎನ್.ಹೇಮಂತ್ ಮಾತನಾಡಿ, ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇಲಾಖೆಯಿಂದ ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಜಾಗೃತದಳದ ಸಿಬ್ಬಂದಿ ನೇಮಿಸಲಾಗುವುದು ಎಂದರು.

ವೆಬ್ ಕ್ಯಾಸ್ಟಿಂಗ್‌ಗಾಗಿ ಈಗಾಗಲೇ ಸಿಬ್ಬಂದಿ ನೇಮಕ ಮಾಡಲಾಗಿದೆ. ಪರೀಕ್ಷೆ ವೇಳೆ ವೆಬ್ ಕ್ಯಾಸ್ಟಿಂಗ್‌ಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಿರಲು ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಎಡಿಸಿ ವಿ.ಅಭಿಷೇಕ್ , ಎಎಸ್ಪಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಬಸ್ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವ ಕಡೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲು ಅಂತಹ ಊರುಗಳನ್ನು ಗುರುತಿಸಿ ಪಟ್ಟಿ ನೀಡುವಂತೆ ಬಿಇಒಗಳಿಗೆ ಸೂಚನೆ ನೀಡಲಾಗಿದೆ
ಎನ್.ಹೇಮಂತ್ ಜಿ.ಪಂ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.