ADVERTISEMENT

ರೈತರ ಹತ್ಯೆಗೆ ಶಿವಮೊಗ್ಗ ಜಿಲ್ಲೆಯಲ್ಲೂ ಆಕ್ರೋಶ, ಪ್ರತಿಭಟನೆ

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 14:34 IST
Last Updated 4 ಅಕ್ಟೋಬರ್ 2021, 14:34 IST
ಶಿವಮೊಗ್ಗದಲ್ಲಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ಉತ್ತರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ಉತ್ತರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಉತ್ತರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಬೆಂಗಾವಲು ವಾಹನ ರೈತರ ಮೇಲೆ ಹರಿದಿದೆ. ಇದು ಕ್ರೂರ ಹತ್ಯೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಈ ರೀತಿಯ ಘೋರ ಕೃತ್ಯ ಹಿಂದೆಂದೂ ನಡೆದಿರಲಿಲ್ಲ. ಈ ಹೀನ ಕೃತ್ಯಕ್ಕೆ ಕಾರಣರಾದ ಸಚಿವರು ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಸಚಿವ ಅಜಯ್ ಮಿಶ್ರಾ ತೆನಿ ಅವರು ರೈತರ ಪ್ರತಿಭಟನೆ ಕುರಿತು ಕಟುವಾಗಿ ಹೇಳಿಕೆ ನೀಡಿದ್ದರು. ಪ್ರತಿಭಟಿಸುವವರ ಮೇಲೆ ಕ್ರಮಕೈಗೊಳ್ಳುವ ಬಹಿರಂಗ ಬೆದರಿಕೆ ಹಾಕಿದ್ದರು. ಹಾಗಾಗಿ, ಅವರ ತವರು ಕ್ಷೇತ್ರ ಲಖೀಂಪುರ್ ಖೇರಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ರೈತರು ಸಚಿವ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ರಸ್ತೆ ತಡೆ ನಡೆಸುತ್ತಿದ್ದ ರೈತರ ಮೇಲೆ
ಬೆಂಗಾವಲು ಪಡೆ ವಾಹನ ಹರಿಸುವ ಮೂಲಕ ಹತ್ಯೆ ಮಾಡಲಾಗಿದೆ. ಕೃತ್ಯ ಭಾರತದ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆಯ ಹಕ್ಕಿನ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಘಟನೆಯ ನಂತರವೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉನ್ನತಾಧಿಕಾರಿಗಳು ಜವಾಬ್ದಾರಿಯುವ ವರ್ತನೆ ತೋರಿಲ್ಲ. ಗಾಯಗೊಂಡ ರೈತರನ್ನು ಅಥವಾ ಅವರ ಕುಟುಂಬ ಸಂಪರ್ಕಿಸಲಿಲ್ಲ. ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ
ಕನಿಷ್ಠ ಭರವಸೆ ನೀಡಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ದೂರಿದರು.

ಕೇಂದ್ರ ಸರ್ಕಾರ, ರಾಷ್ಟ್ರಪತಿ ಮಧ್ಯಪ್ರವೇಶ ಮಾಡಬೇಕು. ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಸರ್ಕಾರ ಸಹ ಘಟನೆ ಖಂಡಿಸಿ ಉತ್ತರ ಪ್ರದೇಶ
ಸರ್ಕಾರಕ್ಕೆ ಖಂಡನಾ ಪತ್ರ ಕಳಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಎಂ.ಶ್ರೀಕಾಂತ್, ಕೆ.ಪಿ.ಶ್ರೀಪಾಲ್, ಎಚ್.ಆರ್.ಬಸವರಾಜಪ್ಪ, ಕೆ.ಟಿ.ಗಂಗಾಧರ್,ಎಂ.ಗುರುಮೂರ್ತಿ, ಕೆ.ಎಲ್.ಅಶೋಕ್, ಟಿ.ಎಚ್.ಹಾಲೇಶಪ್ಪ, ಡಿ.ಎಸ್.ಶಿವಕುಮಾರ್, ವಾಟಾಳ್ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.