ಸಾಗರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಾಲ್ಲೂಕು ಆಡಳಿತ ಕೂಡಲೆ ₹5 ಲಕ್ಷ ಪರಿಹಾರ ವಿತರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಒತ್ತಾಯಿಸಿದ್ದಾರೆ.
ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಗರ ತಾಲ್ಲೂಕಿನಲ್ಲಿ 48, ಹೊಸನಗರ ವ್ಯಾಪ್ತಿಯಲ್ಲಿ 27 ಮನೆಗಳಿಗೆ ಹಾನಿ ಉಂಟಾಗಿದೆ. ತಕ್ಷಣ ಪರಿಹಾರ ಕೊಡುವ ಬದಲು ಅಧಿಕಾರಿಗಳು ನೋವಿನಲ್ಲಿರುವವರ ಮನೆಗೆ ಸಂಬಂಧಪಟ್ಟ ದಾಖಲೆ ಕೇಳುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಮಲೆನಾಡು ಭಾಗದಲ್ಲಿ ಹೆಚ್ಚಿನ ಬಡವರ ಮನೆಗಳಿಗೆ ದಾಖಲೆಗಳು ಇರುವುದಿಲ್ಲ. ಮಳೆ ಹೆಚ್ಚಾದಾಗ ತೊಂದರೆಗೆ ಒಳಗಾಗುವವರು ಈ ವರ್ಗದವರೇ. ಹೀಗಿರುವಾಗ ಇವರಿಂದ ದಾಖಲೆ ಕೊಡಿ ಎಂದು ಕೇಳುವುದು ಅಮಾನವೀಯ ನಡೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕಿನಲ್ಲಿ ಈ ವರ್ಷ ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕೃಷಿಭೂಮಿ ಮುಳುಗಡೆಯಾಗಿದೆ. ಮತ್ತಷ್ಟು ಮಳೆಯಾಗುತ್ತದೆ ಎಂಬ ವರದಿ ಇದೆ. ಹೀಗಿದ್ದರೂ ತಾಲ್ಲೂಕು ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಎದುರಾಗಬಹುದಾದ ಅವಘಡಗಳನ್ನು ತಪ್ಪಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿಲ್ಲ ಎಂದು ಅವರು ದೂರಿದರು.
ತಾಲ್ಲೂಕಿನಲ್ಲಿ ಡೆಂಗಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗೌತಮಪುರದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ಡೆಂಗಿ ಜ್ವರಕ್ಕೆ ಬಲಿಯಾಗಿದ್ದಾರೆ. ಕಾಯಿಲೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ಜನಪ್ರತಿನಿಧಿಗಳು ನೀಡುವ ಸೂಚನೆ ಜಾರಿಗೆ ಬರುತ್ತಿಲ್ಲ ಎಂದು ಅವರು ಆರೋಪಿಸಿದರು.
ಅತಿವೃಷ್ಟಿಯಿಂದ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಆಡಳಿತ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ನೆಪ ಮಾತ್ರಕ್ಕೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹೋಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ.
ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ. ರತ್ಮಾಕರ ಹೊನಗೋಡು, ಕೆ.ಜಿ.ಪ್ರಶಾಂತ್, ಭರ್ಮಪ್ಪ ಅಂದಾಸುರ, ವಿ.ಮಹೇಶ್, ಗಿರೀಶ್ ಗೌಡ, ಸತೀಶ್ ಕೆ. ಸುವರ್ಣ ಟೀಕಪ್ಪ, ಬಿ.ಟಿ.ರವೀಂದ್ರ, ರಾಯಲ್ ಸಂತೋಷ್, ಜಿ.ಕೆ.ಭೈರಪ್ಪ ಇದ್ದರು.
ರಾಜ್ಯದ ಅಪೆಕ್ಸ್ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದ ಅವ್ಯವಹಾರ ನಡೆದಿರುವ ಸುಳಿವು ದೊರಕಿದೆ. ಈ ಹಗರಣದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖರು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲೆ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ
-ಹರತಾಳು ಹಾಲಪ್ಪ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ
ಸ್ಥಳೀಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಇದೆ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಹೀಗಿರುವಾಗ ಕಾಗೋಡು ತಿಮ್ಮಪ್ಪ ಅವರ ಕುಟುಂಬವನ್ನು ಹರತಾಳು ಹಾಲಪ್ಪ ಒಡೆದಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ಸಿಗರು ಆರೋಪಿಸುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ
- ಡಾ.ರಾಜನಂದಿನಿ ಕಾಗೋಡು ಬಿಜೆಪಿ ನಾಯಕಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.