ಸೊರಬ: ‘ಉತ್ತಮ ಭವಿಷ್ಯಕ್ಕೆ ಬಾಲ್ಯ ಮತ್ತು ಯೌವನದ ಜೀವನ ಪ್ರಮುಖ ಘಟ್ಟ. ಬಾಲ್ಯದಲ್ಲಿ ಉತ್ತಮ ಸಂಸ್ಕಾರ ಮತ್ತು ಯೌವನದಲ್ಲಿ ಸೂಕ್ತ ಶಿಕ್ಷಣ ಸಿಕ್ಕರೆ ಶ್ರೇಷ್ಠ ವ್ಯಕ್ತಿಗಳಾಗಬಹುದು. ವಿದ್ಯಾರ್ಥಿಗಳು ಶ್ರಮಪಟ್ಟು ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024–25ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್, ರೋವರ್ಸ್ ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಬೇಕು. ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಎಸ್‌ಎಸ್ ಶಿಬಿರದಲ್ಲಿ ಸಕ್ರೀಯವಾಗಿ ಭಾಗಿಯಾಗಬೇಕು. ಇದರಿಂದ ನಾಯಕತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.
‘ತಂದೆ ಎಸ್.ಬಂಗಾರಪ್ಪ ಅವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿತ್ತು. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಿದೆ. ಈ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಬೇಕಾಗಿರುವ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಸಚಿವನಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಬದಲಾವಣೆಗಳನ್ನು ತಂದಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ. ದೇಶದಲ್ಲಿ ಯಾವುದೇ ಬದಲಾವಣೆ, ಅಭಿವೃದ್ಧಿ ಆಗುವುದಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ’ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ನೇತ್ರಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಬಗರ್ ಹುಕುಂ ಸಮಿತಿ ತಾಲ್ಲೂಕು ಅಧ್ಯಕ್ಷ ಎಂ.ಡಿ. ಶೇಖರ್, ಸಿಪಿಐ ರಾಜಶೇಖರ್, ಹಾ.ಉಮೇಶ್, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಜೆ, ಸದಸ್ಯರಾದ ಹೂವಪ್ಪ, ಪ್ರವೀಣ್ ಶಾಂತಗೇರಿ, ಹರೀಶ್, ಮಹಮದ್ ಸಾಜೀದ್, ಡಾ.ಜೋಶಿ, ರಾಜೇಶ್, ಮಂಜುನಾಥ್ ಮತ್ತು ಮಹೇಶ್ವರಿ ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.