ADVERTISEMENT

ಸಿದ್ದರಾಮಯ್ಯ ವಿರುದ್ಧ ಪ್ರಕರಣಕ್ಕೆ ಅನುಮತಿ: ರಾಜ್ಯಪಾಲರ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:26 IST
Last Updated 17 ಆಗಸ್ಟ್ 2024, 16:26 IST
ಸಾಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು
ಸಾಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು    

ಸಾಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಕೆಲಕಾಲ ಜೋಗ ರಸ್ತೆಯ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ನಂತರ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು.

ಮೈಸೂರಿನ ಮೂಡಾದಿಂದ ನಿವೇಶನ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಬಿಜೆಪಿಯ ಕೈವಾಡವಿದೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆರೋಪಿಸಿದರು.

ADVERTISEMENT

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ನೀಡುವ ಮೂಲಕ ರಾಜ್ಯದ ಜನತೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ನ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿರುವ ಬಿಜೆಪಿ ಮುಖಂಡರು ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಬೀಳಿಸಲು ಮುಂದಾಗಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ದೂರಿದರು.

ಐದು ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರು ಯಶಸ್ವಿಯಾಗಿ ಜಾರಿಗೊಳಿಸಿರುವುದನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಸಾಧ್ಯವಾಗುತ್ತಿಲ್ಲ. ಅವರ ಜನಪ್ರಿಯತೆಗೆ ಕುಂದು ತರುವ ದುರುದ್ದೇಶದಿಂದಲೆ ಬಿಜೆಪಿಯವರು ರಾಜಭವನದ ಮೂಲಕ ಷಡ್ಯಂತ್ರ ನಡೆಸಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾವತಿ ಚಂದ್ರಕಾಂತ್ ಆರೋಪಿಸಿದರು.

ನಗರಸಭೆ ಸದಸ್ಯರಾದ ಮಧುಮಾಲತಿ, ಸೈಯದ್ ಜಾಕೀರ್, ಗಣಪತಿ ಮಂಡಗಳಲೆ, ಉಮೇಶ್, ರವಿಕುಮಾರ್ ವಿಜಯನಗರ, ಚಂದ್ರಪ್ಪ, ಪ್ರಮುಖರಾದ ಕೆ.ಹೊಳಿಯಪ್ಪ, ಮಹ್ಮದ್ ಖಾಸಿಂ, ಅಶೋಕ್ ಬೇಳೂರು, ಜ್ಯೋತಿ ಕೋವಿ, ಪ್ರೇಮ್ ಸಿಂಗ್, ಡಿ.ದಿನೇಶ್, ರವಿಕುಮಾರ ಗೌಡ, ಎನ್.ಉಷಾ, ಭವ್ಯ ಕೃಷ್ಣಮೂರ್ತಿ, ಉಮೇಶ್ ನಾಯ್ಕ, ವಿಲ್ಸನ್ ಗೊನ್ಸಾಲ್ವಿಸ್, ಸಿದ್ದಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.