ADVERTISEMENT

ಸಿದ್ಲಿಪುರ ಕಟ್ಟಡ ಕುಸಿತ, ನೊಂದ ಕುಟುಂಬಕ್ಕೆ ಪರಿಹಾರ ಕೊಡಿ

ತಾಲ್ಲೂಕು ಪಂಚಾಯಿತಿಸಾಮಾನ್ಯಸಭೆ: ಶಾಸಕಿ ಶಾರದಾ ಪೂರ್ಯಾನಾಯ್ಕ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 4:23 IST
Last Updated 29 ಅಕ್ಟೋಬರ್ 2025, 4:23 IST
ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ನೋಟ
ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ನೋಟ   

ಶಿವಮೊಗ್ಗ: ‘ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಲ್ಲಿ ಕಾರ್ಮಿಕ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕುಟುಂಬಕ್ಕೆ ಪರಿಹಾರ ಒದಗಿಸಬೇಕು’ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಕಾರ್ಮಿಕ ಇಲಾಖೆ ಜಾಗೃತಿ ವಹಿಸಬೇಕು. ವಿವಿಧ ಮಂಡಳಿಗಳ ಯೋಜನೆ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಬೇಕು ಎಂದು ಒತ್ತಾಯಿಸಿದರು. 

ADVERTISEMENT

ಮಿಷನ್ ಸುರಕ್ಷಾ ಅಭಿಯಾನಕ್ಕೆ ಆಯನೂರು, ಕುಂಸಿ, ಚೋರಡಿ ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಗಳಿಗೆ ಕಾರ್ಮಿಕ ನಿರೀಕ್ಷಕರನ್ನು ನೋಡಲ್ ಆಫೀಸರ್ ಆಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕ ಆಯ್ಕೆ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೌಲಭ್ಯ ಸರಿಯಾಗಿ ದೊರಕಬೇಕು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ ನಾಯ್ಕ ಪ್ರತಿಕ್ರಿಯಿಸಿ, ‘124 ಅತಿಥಿ ಶಿಕ್ಷಕರ ಹುದ್ದೆ ಖಾಲಿ ಇದ್ದು, ಈ ಪೈಕಿ 114 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೇಮಕಾತಿ ಪೂರ್ಣಗೊಳಿಸಲಾಗುವುದು. 20,146 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, 22,144 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ಶೂ ಹಾಗೂ ಸಾಕ್ಸ್ ನೀಡಲಾಗಿದೆ. 32,028 ಮಕ್ಕಳು ಕ್ಷೀರಭಾಗ್ಯ ಹಾಗೂ ಬಿಸಿಯೂಟ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇದರೊಂದಿಗೆ ವಾರದಲ್ಲಿ ಐದು ದಿನ ಹಾಲಿನೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಶಾಲಾ ಅಡುಗೆ ಸಿಬ್ಬಂದಿಗೆ ಜೂನ್‌ನಿಂದ ₹1,000 ಸಂಭಾವನೆ ಹೆಚ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮೀ ಯೋಜನೆಯಡಿ ಜುಲೈವರೆಗೆ ಜಿಲ್ಲೆಯಲ್ಲಿ 1,400 ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.  

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧು, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.