
ಶಿವಮೊಗ್ಗ: ಸ್ವಾಮಿ ವಿವೇಕಾನಂದರು ಕೇವಲ ಒಬ್ಬ ವ್ಯಕ್ತಿಯಲ್ಲ. ಅವರು ಯುವಶಕ್ತಿ. ವೀರ ಸನ್ಯಾಸಿಯಾಗಿದ್ದು ಯುವಜನತೆಗೆ ಮಾದರಿಯಾಗಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಜಿಲ್ಲಾಡಳಿತದಿಂದ ಸೋಮವಾರ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಅಂಗವಾಗಿ ಏರ್ಪಡಿಸಿದ್ದ ಐಎಎಸ್ ಮತ್ತು ಐಪಿಎಸ್ ತರಬೇತಿ ಕಾರ್ಯಾಗಾರ ಹಾಗೂ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ತಮ್ಮ ಜೀವನ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಅವರೊಂದು ವಿಶ್ವವಿದ್ಯಾಲಯ ಆಗಿದ್ದರು. ದೇಶಭಕ್ತಿ, ಪ್ರಾಮಾಣಿಕತೆ ಮತ್ತು ನಂಬಿಕೆಯ ಪ್ರತೀಕ ಅವರು. ಯುವಜನತೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದಬೇಕು ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಮಾತನಾಡಿ, ಸ್ವಾಮಿ ವಿವೇಕಾನಂದರವರು ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮ, ಸಂಸ್ಕೃತಿಯ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದರು ಎಂದರು.
ಯುವ ಸಪ್ತಾಹದ ಅಂಗವಾಗಿ ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಕ್ರೀಡೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಡಿಸಿ ವಿ.ಅಭಿಷೇಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಜರಿದ್ದರು.
ಯುವಜನತೆ ಆಲಸ್ಯದ ಬಡತನದಿಂದ ಹೊರಬರಬೇಕು. ಸ್ವಾಮಿ ವಿವೇಕಾನಂದರು ಹೇಳಿದಂತೆ ಉತ್ತಮ ವ್ಯಕ್ತಿತ್ವ ಉದಾತ್ತ ಚಿಂತನೆ ಮೌಲ್ಯಗಳ ಶ್ರೀಮಂತಿಕೆ ಹೊಂದಬೇಕು. ಇದರ ಮುಖೇನ ಕುಟುಂಬ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ಸಾಧ್ಯಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾಧಿಕಾರಿ
ಯುಪಿಎಸ್ಸಿ ಪರೀಕ್ಷೆ ತಯಾರಿಗೆ ಮಾರ್ಗದರ್ಶನ.
ಪ್ರೊಬೆಷನರಿ ಐಎಎಸ್ ಅಧಿಕಾರಿ ನಾಗೇಂದ್ರ ಕುಮಾರ್ ಬಾಬು ಹಾಗೂ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೇಘಾ ಅಗರ್ವಾಲ್ ಪಿಪಿಟಿ ಪ್ರದರ್ಶನದ ಮೂಲಕ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ಪರೀಕ್ಷೆ ಸಂದರ್ಶನ ಮತ್ತು ಆಯ್ಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸೈಬರ್ ಕ್ರೈಮ್ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಮಾದಕ ವಸ್ತುಗಳ ದುಷ್ಪರಿಣಾಮ ಎನ್‌ಡಿಪಿಎಸ್ ಕಾಯ್ದೆ ಮಾದಕ ವಸ್ತುಗಳಿಂದ ದೂರು ಇರಬೇಕಾದ ಅಗತ್ಯತೆಯ ಬಗ್ಗೆ ಕಿವಿಮಾತು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.