ಸೊರಬ: ‘ದೇಶದ ಪ್ರಗತಿಗೆ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ಸಮಗ್ರ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಪಠ್ಯ ಶಿಕ್ಷಣಕ್ಕೆ ತೊಂದರೆಯಾಗದಂತೆ ಕೌಶಲದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಡಾ.ರಾಜ್ ಕಲಾಕ್ಷೇತ್ರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಬದುಕಿಗೆ ಅಗತ್ಯವಿರುವ ಮೌನವೀಯ ಗುಣಗಳು, ಶಿಕ್ಷಣದ ಮೌಲ್ಯವನ್ನು ತಿಳಿಸಿಕೊಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ತಂದೆ- ತಾಯಿ ಮಗುವಿಗೆ ಜನ್ಮನೀಡಿದರೆ, ಜೀವನಕ್ಕೆ ಅಗತ್ಯವಿರುವ ಮಾರ್ಗದರ್ಶನ ನೀಡುವುದು ಗುರುಗಳಿಂದ ಸಾಧ್ಯ’ ಎಂದರು.
‘ಬದುಕಿನಲ್ಲಿ ಕಳೆದುಕೊಳ್ಳಲು ಸಾಧ್ಯವಾಗದ ಸಂಪತ್ತು ಎಂದರೆ ವಿದ್ಯೆ ಮಾತ್ರ. ಇದಕ್ಕೆ ಯಾವುದೇ ಚೌಕಟ್ಟಿನ ವ್ಯಾಪ್ತಿಯು ಇರುವುದಿಲ್ಲ. ರಾಜ್ಯದ ಕೆಲವಡೆ ಪರೀಕ್ಷೆಗಳಲ್ಲಿ ನಡೆಯುತ್ತಿದ್ದ ನಕಲು ತಡೆಯಲು ಅಗತ್ಯ ಕ್ರಮ ವಹಿಸಲಾಗಿದ್ದರೂ ಸಹ ಉತ್ತಮ ಫಲಿತಾಂಶ ಲಭಿಸಿದೆ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಮರೆಯದೇ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.
‘ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ತರಬೇತಿ ದೊರೆಯಬೇಕು ಎನ್ನುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ’ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಹಾಗೂ ವಿಶೇಷ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ ಶಾಲೆಗಳಿಗೆ ಪ್ರಶಂಸನಾ ಪತ್ರ ನೀಡಲಾಯಿತು. ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಎ.ವಿ. ಪವಿತ್ರ ಶಿಕ್ಷಕರ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.
ರಾಜ್ಯ ಎಸ್.ಸಿ-ಎಸ್.ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ತಾ.ಪಂ. ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲ ಗೌಡ, ಬಗರಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಜಿ.ಪಂ. ಮಾಜಿ ಸದಸ್ಯ ತಬಲಿ ಬಂಗಾರಪ್ಪ, ಶಿವಲಿಂಗೇಗೌಡ, ವೀರೇಶ್ ಕೊಟಗಿ, ತಾರಾ ಶಿವಾನಂದಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್, ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್, ಬಿಇಒ ಆರ್.ಪುಷ್ಪಾ, ತಾ.ಪಂ. ಇಒ ಕೆ.ಜಿ. ಶಶಿಧರ್, ಪುರಸಭೆ ಮುಖ್ಯಾಧಿಕಾರಿ ಎಚ್.ವಿ. ಚಂದನ್, ಪಿಂ ಪೋಷನ್ ಶಕ್ತಿ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ಕೆ.ಸಿ. ಶ್ರೀಕಾಂತ್, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪರಮೇಶ್ವರಪ್ಪ, ಶಿಕ್ಷಣ ಸಂಯೋಜಕ ಎಚ್. ಅರುಣ್ ಕುಮಾರ್, ಹಾಲೇಶ್ ನವುಲೆ, ಎಚ್. ಹಾಲೇಶ್, ಪ್ರಕಾಶ್ ಮಡ್ಲೂರು, ಶಿವಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.