ADVERTISEMENT

ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2025, 15:42 IST
Last Updated 8 ಫೆಬ್ರುವರಿ 2025, 15:42 IST
ಸಾಗರದ ಬಿಎಚ್ ರಸ್ತೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಶನಿವಾರ ಶಾಸಕ ಗೋಪಾಲಕೃಷ್ಣ ಬೇಳೂರು ವೀಕ್ಷಿಸಿದರು.
ಸಾಗರದ ಬಿಎಚ್ ರಸ್ತೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಶನಿವಾರ ಶಾಸಕ ಗೋಪಾಲಕೃಷ್ಣ ಬೇಳೂರು ವೀಕ್ಷಿಸಿದರು.   

ಸಾಗರ: ‘ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂಬುದು ಬಿಜೆಪಿ ನಡೆಸುತ್ತಿರುವ ಅಪಪ್ರಚಾರ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದರು.

ನಗರದ ಬಿ.ಎಚ್.ರಸ್ತೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಶನಿವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಗರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸಂಪರ್ಕ ಸೇತುವೆ, ಕಾಲುಸಂಕ ನಿರ್ಮಾಣಕ್ಕೆ ₹ 75 ಕೋಟಿ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 35 ಕೋಟಿ ಅನುದಾನ ನೀಡಿದ್ದಾರೆ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹ 10 ಕೋಟಿ, ಮಿನಿ ವಿಧಾನಸೌಧದ ಹೆಚ್ಚುವರಿ ಸೌಕರ್ಯಕ್ಕೆ ₹ 4.50 ಕೋಟಿ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

‘ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಿಜೆಪಿಯ ಪಾಪದ ಕೂಸು. ಯಾವತ್ತೂ ಬಿಜೆಪಿಯವರಿಗೆ ಭೂಮಿಯ ಹಕ್ಕುಪತ್ರ ನೀಡಿ ಅಭ್ಯಾಸವೇ ಇಲ್ಲ. ಅವರು ಅಧಿಕಾರದಲ್ಲಿದ್ದಾಗ ತೋರಿದ ನಿರ್ಲಕ್ಷ್ಯದ ಪರಿಣಾಮ ಮುಳುಗಡೆ ಸಂತ್ರಸ್ತರು ಇಂದಿಗೂ ಹಕ್ಕುಪತ್ರವಿಲ್ಲದೆ ಕೊರಗುವಂತಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರಸಭೆ ಸದಸ್ಯ ಶ್ರೀನಿವಾಸ್ ಮೇಸ್ತ್ರಿ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಶಾಸಕರ ವಿಶೇಷ ಕರ್ತವ್ಯ ಅಧಿಕಾರಿ ಟಿ.ಪಿ.ರಮೇಶ್, ಮಹಾಬಲ ಕೌತಿ, ಭವ್ಯ ಕೃಷ್ಣಮೂರ್ತಿ, ಮನೋಜ್ ಕುಗ್ವೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.