ಸಾಗರ: ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಗಳು ಪತ್ರಕರ್ತರಿಗೆ ಬೆದರಿಕೆ ಹಾಕಿರುವ ಘಟನೆ ಖಂಡಿಸಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಯಿತು.
‘ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಕಬಳಿಸುತ್ತಿರುವ ಪ್ರಕರಣಗಳ ಬಗ್ಗೆ ಪತ್ರಕರ್ತರು ವರದಿ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ರವೀಂದ್ರ ಕಾಮತ್, ಪ್ರದೀಪ್ ಅವರು ಪತ್ರಕರ್ತ ಮಹೇಶ್ ಹೆಗಡೆ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದು ಖಂಡನೀಯ’ ಎಂದು ಮನವಿಯಲ್ಲಿ ಹೇಳಲಾಗಿದೆ.
‘ಪ್ರಕರಣದ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ನಾಗೇಶ್, ಉಪಾಧ್ಯಕ್ಷ ಲೋಕೇಶ್ ಕುಮಾರ್, ಕಾರ್ಯದರ್ಶಿ ಮಹೇಶ್ ಹೆಗಡೆ, ಖಜಾಂಚಿ ಎಂ.ಜಿ.ರಾಘವನ್, ಪ್ರಮುಖರಾದ ಇಮ್ರಾನ್ ಸಾಗರ್, ಜಮೀಲ್ ಸಾಗರ್, ರಫೀಕ್ ಕೊಪ್ಪ, ಗಿರೀಶ್ ರಾಯ್ಕರ್, ಸತ್ಯನಾರಾಯಣ, ವಸಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.