ADVERTISEMENT

ಶೌಚಾಲಯ ನಿರ್ಮಾಣ ಸಹಾಯಧನ ₹ 20 ಸಾವಿರಕ್ಕೆ ಹೆಚ್ಚಳ

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಕಾರ್ಯಾಗಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 4:18 IST
Last Updated 11 ಜುಲೈ 2021, 4:18 IST
ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಇದ್ದರು.
ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಇದ್ದರು.   

ಶಿವಮೊಗ್ಗ: ಸ್ವಚ್ಛ ಭಾರತ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು ₹ 20 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಲ್ಲಿನ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರು ಶೌಚಾಲಯ ನಿರ್ಮಿಸಿಕೊಂಡರೆ ಅವರಿಗೆ ಈಗ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುತ್ತದೆ. ಇದನ್ನು ಸದು‍ಪಯೋಗ ಮಾಡಿಕೊಳ್ಳಬೇಕು
ಎಂದು ತಿಳಿಸಿದರು.

ADVERTISEMENT

ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗವನ್ನು ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿಗಳದ್ದು. ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುಳಿತು ಚರ್ಚಿಸಿ ಅಂತಿಮಗೊಳಿಸಬೇಕು ಎಂದು ಸಲಹೆ ನೀಡಿದರು.

ಆದ್ಯತೆ ಮೇರೆಗೆ ಕೆರೆ–ಕಟ್ಟೆ ಅಭಿವೃದ್ಧಿ: ಕೆರೆ–ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಲಾಗುತ್ತಿದೆ.
ಕಸ ವಿಲೇವಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಗ್ರಾಮ ಪಂಚಾಯಿತಿಗಳ ಜವಾಬ್ದಾರಿ
ಎಂದರು.

ಖಾತ್ರಿ ಯೋಜನೆಯಡಿ ₹ 2,256 ಕೋಟಿ ಬಿಡುಗಡೆ: ಕೇಂದ್ರ ಸರ್ಕಾರ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ₹ 2,256 ಕೋಟಿ ಬಿಡುಗಡೆ ಮಾಡಲಾಗಿದೆ. ಈ ರೀತಿಯ ಕಾರ್ಯಾಗಾರಗಳ ಮೂಲಕ ಯೋಜನೆಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ
ತಿಳಿಸಿದರು.

ಶಾಸಕ ಎಚ್‌. ಹಾಲಪ್ಪ ಹರತಾಳು, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಎಸ್‌.ರುದ್ರೇಗೌಡ, ‘ಸೂಡಾ’ ಅಧ್ಯಕ್ಷ ಜ್ಯೋತಿ ಪ್ರಕಾಶ್, ‘ಕಾಡಾ’ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.