ADVERTISEMENT

ಶಿಷ್ಟಾಚಾರ ಪಾಲಿಸದ ಅಧಿಕಾರಿಗಳು: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 14:10 IST
Last Updated 8 ಜನವರಿ 2021, 14:10 IST
ನಯನಾ ಹೆಗಡೆ
ನಯನಾ ಹೆಗಡೆ   

ಸೊರಬ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುರುವಾರ ನೀಡಿದ ತರಬೇತಿ ಕಾರ್ಯಾಗಾರದಲ್ಲಿ ಶಿಷ್ಟಾಚಾರ ಪಾಲಿಸದೇ ತಾಲ್ಲೂಕು ಪಂಚಾಯಿತಿ ಇಒ ನಂದಿನಿ ಉದ್ಧಟತನ ತೋರಿದ್ದಾರೆ. ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಯನಾ ಹೆಗಡೆ ಆಗ್ರಹಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ ಸದಸ್ಯರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತರಬೇತಿ ನಡೆಸುವ ಕುರಿತು ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಕಾರ್ಯನಿರ್ವಾಹಣಾಧಿಕಾರಿ ನಂದಿನಿ ಅವರು ರಾಜಕೀಯ ಒತ್ತಡಕ್ಕೆ ಮಣಿದು ಯಾವುದೇ ಜನಪ್ರತಿನಿಧಿಗಳಿಗೆ ಮಾಹಿತಿ ನೀಡದೇ ಕಾರ್ಯಾಗಾರ ನಡೆಸಿದ್ದಾರೆ. ಮೇಲಧಿಕಾರಿಗಳು ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಆನವಟ್ಟಿಯಲ್ಲಿ ಹಾದುಹೋದ ಹೆದ್ದಾರಿಯ ಬೀದಿ ದೀಪಗಳ ಅಳವಡಿಕೆಗೆ ಸಂಸದರು ₹ 2.5 ಕೋಟಿ ಅನುದಾನ ನೀಡಿದ್ದಾರೆ. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ, ಸಂಸದರು ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಆದರೆ ಅಧಿಕಾರಿಗಳು ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲಿಸದೇ, ಪ್ರತಿನಿಧಿಗಳು ಸೇರಿ ಯಾರಿಗೂ ತಿಳಿಸದೆ ಕಾರ್ಯಕ್ರಮ ನಡೆಸುವ ಮೂಲಕ ಸರ್ಕಾರಕ್ಕೆ, ಮುಖ್ಯಮಂತ್ರಿ ಹಾಗೂ ಸಂಸದರಿಗೆ ಅವಮಾನ ಮಾಡಿದ್ದಾರೆ. ಸಂಬಂಧಿಸಿದ ಇಲಾಖೆ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರ ಕೋಟ್ಯಾಂತರ ರೂಪಾಯಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೀಡಿರುವ ಅನುದಾನ ಜನಪ್ರತಿನಿಧಿಗಳಿಗೆ ಹಾಗೂ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಸ್ಥಾಯಿ ಸಮಿತಿ ಅಧ್ಯಕ್ಷ ನರೇಂದ್ರ ಒಡೆಯರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.