ADVERTISEMENT

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ ನಿಲ್ಲದಿದ್ದರೆ ಹೋರಾಟ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 6:04 IST
Last Updated 9 ನವೆಂಬರ್ 2021, 6:04 IST

ಶಿವಮೊಗ್ಗ: ‘ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ದಲಿತ ವಿರೋಧಿ ಎಂದು ಬಿಂಬಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸದಿದ್ದರೆ ಪಕ್ಷದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ. ಲಕ್ಷ್ಮಣ್ ಎಚ್ಚರಿಸಿದರು.

‘ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿಯೇ ದಲಿತರಿಗಾಗಿ ವಿಶೇಷ ಯೋಜನೆ ರೂಪಿಸಲಾಗಿದೆ. ಆದರೆ, ಅವರ ವಿರುದ್ಧವೇ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಡಾ.ಬಿ.ಅರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳು ಪಡೆದಿದ್ದ ಸಾಲವನ್ನು ಸಂಪೂರ್ಣ ಮನ್ನಾ ಮಾಡಿದ್ದರು. ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪಿಸಿ ₹ 1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದರು. ಆದರೆ, ಈಗಿನ ಬಿಜೆಪಿ ಸರ್ಕಾರ ಈ ಎರಡೂ ನಿಗಮಗಳಿಗೆ ಇದುವರೆಗೆ ಅಧ್ಯಕ್ಷರನ್ನೇ ನೇಮಿಸಿಲ್ಲ’ ಎಂದು ದೂರಿದರು.

ADVERTISEMENT

‘ಪೌರಕಾರ್ಮಿಕರಿಗೆ ಸಂಬಳ ಹೆಚ್ಚಳ, ದಲಿತರ ಕಾಲೊನಿಗಳಿಗೆ ಮೂಲಸೌಲಭ್ಯಗಳು, ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದಲಿತರು ಉನ್ನತ ಹುದ್ದೆಯಲ್ಲಿದ್ದರು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ದಲಿತರಿಗೆ ಕಿರುಕುಳ ನೀಡಿ ಹುದ್ದೆಯಿಂದ ಕೈ ಬಿಡಲಾಗಿದೆ. ಇದು ಬಿಜೆಪಿ ಸರ್ಕಾರದ ವೈಫಲ್ಯ’ ಎಂದು ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಮಂಗಳಾ ಅಣ್ಣಪ್ಪ, ಕಾಂಗ್ರೆಸ್ ಮುಖಂಡರಾದ ವಿಜಯ್, ನಿಖಿಲ್, ನರಸಿಂಹಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.