ಹುಬ್ಬಳ್ಳಿ: ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ರಾಜಕೀಯ ದುರುದ್ದೇಶದಿಂದ ಪ್ರತಿಪಕ್ಷಗಳ ಮುಖಂಡರ ಹೆಸರನ್ನು ತರಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಕೆಲವರನ್ನು ಸೂಕ್ತ ದಾಖಲೆಗಳಿಲ್ಲದಿದ್ದರೂ ಅನಾವಶ್ಯಕವಾಗಿ ವಿಚಾರಣೆ ಮಾಡಲಾಗುತ್ತಿದೆ ಎಂದರು.
ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಿ. ದಾಖಲೆಗಳಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಶಾಸಕ ಜಮೀರ್ ಅಹ್ಮದ್ ಅವರೇ ಹೇಳಿದ್ದಾರೆ. ಪ್ರಶಾಂತ ಸಂಬರಗಿ ಹೇಳಿದ ಮಾತ್ರಕ್ಕೆ ತನಿಖೆ ಮಾಡಲು ಆಗುವುದಿಲ್ಲ. ದಾಖಲೆಗಳನ್ನಿಟ್ಟುಕೊಂಡು ತನಿಖೆ ಮಾಡಲಿ ಎಂದು ಸವಾಲು ಹಾಕಿದರು.
ಕೇಂದ್ರದಿಂದ ಪ್ರವಾಹ ಪರಿಹಾರಕ್ಕಾಗಿ ಹಣ ಬಿಡುಗಡೆಯಾಗಿಲ್ಲ. ರಾಜ್ಯದಿಂದ ಬಿಜೆಪಿಯ 25 ಮಂದಿ ಸಂಸದರು ಆಯ್ಕೆಯಾಗಿದ್ದರೂ ಕೇಂದ್ರವನ್ನು ಕೇಳುವ ತಾಕತ್ತು ಅವರಿಗಿಲ್ಲ. ಪ್ರವಾಹ ಪೀಡಿತರಾದವರಿಗೆ ಈಗಲೂ ಪರಿಹಾರ ಸಿಕ್ಕಿಲ್ಲ ಎಂದು ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಆರ್ಥಿಕವಾಗಿಯೂ ದಿವಾಳಿಯಾಗಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.
ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಜೆಡಿಎಸ್ ಮುಖಂಡರಿಗೆ ಸ್ಪಷ್ಟವಾದ ನಿಲುವಿಲ್ಲ. ದಿನಕ್ಕೊಂದು ನಿಲುವು ಬದಲಾಯಿಸುತ್ತಿರುತ್ತಾರೆ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.