ADVERTISEMENT

ಗಂಡಂದಿರ ದೂರವಿಟ್ಟು ಅಧಿಕಾರ ನಡೆಸಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 10:09 IST
Last Updated 21 ಡಿಸೆಂಬರ್ 2012, 10:09 IST
ತುಮಕೂರು: ಪ್ರಜಾಪ್ರಭುತ್ವದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶ ದೊರೆಯುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ 50ರಷ್ಟು ಮೀಸಲಾತಿ ಸಿಗುತ್ತಿದೆ. ಅದನ್ನು ಬಳಸಿಕೊಂಡು ಗಂಡಂದಿರು ಹಸ್ತಕ್ಷೇಪ ಮಾಡದಂತೆ ಅಧಿಕಾರ ನಿರ್ವಹಿಸುವಂತೆ ಮಹಿಳಾ ಜನಪ್ರತಿನಿಧಿಗಳಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಸಲಹೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಜಿಲ್ಲಾ ಬಾಲ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಸ್ತ್ರೀಶಕ್ತಿ, ಮಹಿಳಾ ಸ್ವಸಹಾಯ ಸಂಘಗಳ ಜಿಲ್ಲಾಮಟ್ಟದ ವಸ್ತುಪ್ರದರ್ಶನ, ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾಗಲು ಪ್ರಯತ್ನಿಸಬೇಕು. ಕುಟುಂಬದ ಆಧಾರವೇ ಮಹಿಳೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಅಬಲೆಯರಲ್ಲ ಎನ್ನುವುದು ಸಾಬೀತಾಗಿದೆ. ಆದರೆ ಇದು ಕೌಟುಂಬಿಕ ವಿಘಟನೆಗೆ ಕಾರಣ ಆಗಬಾರದು. ಇದರಿಂದ ಸಾಮಾಜದ ಸ್ವಾಸ್ಥ್ಯ ಕೆಡುತ್ತದೆ. ಸಾಧನೆ ಜೊತೆಗೆ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಶಿಸ್ತು, ಸಮಯಪಾಲನೆ ಜತೆಗೆ ಉತ್ತಮ ಗುಣಮಟ್ಟ ಕಾಪಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಸಾಧಿಸಿ. ಅಲ್ಲದೆ ಅಧಿಕಾರಿಗಳು ಸಹ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿಯೇ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಸ್ವ ಉದ್ಯೋಗ ಕೈಗೊಳ್ಳುತ್ತಿದ್ದರೆ ಉತ್ತಮ ಮಾರ್ಗದರ್ಶನ ಪಡೆಯುವುದು ಒಳಿತು. ಅಲ್ಲದೆ ಗ್ರಾಮಾಂತರ ಮಹಿಳೆಯರನ್ನು ಸ್ವ ಉದ್ಯೋಗ ಯೋಜನೆಗಳಲ್ಲಿ ತೊಡಗಿಸಿಕೊಂಡು ತರಬೇತಿ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಮಮತಾ, ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕಿ ಸುಜಾತ, ಸಿಡಿಪಿಒ ನಟರಾಜು ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.