ADVERTISEMENT

ತಿಪಟೂರು ಬಂದ್ ಸಂಪೂರ್ಣ

ಶಾಸಕ ಷಡಕ್ಷರಿಗೆ ಟಿಕೆಟ್‌ ತಪ್ಪಿದ್ದಕ್ಕೆ ಖಂಡನೆ; ಕಾರ್ಯಕರ್ತರೊಬ್ಬರ ಆತ್ಮಹತ್ಯೆ ಯತ್ನ; ಉರುಳು ಸೇವೆ ಮಾಡಿದ ಬೆಂಬಲಿಗರು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 11:01 IST
Last Updated 17 ಏಪ್ರಿಲ್ 2018, 11:01 IST
ತಿಪಟೂರು ಸಿಂಗ್ರಿ ನಂಜಪ್ಪ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಿದರು
ತಿಪಟೂರು ಸಿಂಗ್ರಿ ನಂಜಪ್ಪ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಿದರು   

ತಿಪಟೂರು: ಶಾಸಕ ಕೆ.ಷಡಕ್ಷರಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಆಕ್ರೋಶಗೊಂಡ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕರೆ ನೀಡಿದ್ದ ತಿಪಟೂರು ಬಂದ್ ಸಂಪೂರ್ಣವಾಗಿತ್ತು. ಪ್ರತಿಭಟನೆ ವೇಳೆ ಕಾರ್ಯಕರ್ತರೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದ ಘಟನೆಯೂ ನಡೆಯಿತು.

ಕಾರ್ಯಕರ್ತರು, ಅಭಿಮಾನಿಗಳು ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕಾರ್ಯಕರ್ತರು ಬೈಕ್‍ಗಳಲ್ಲಿ ರ‍್ಯಾಲಿ ನಡೆಸಿ ಷಡಕ್ಷರಿ ಪರ ಘೋಷಣೆ ಕೂಗಿದರು. ಪ್ರತಿಭಟನೆ ವೇಳೆ ಕೆಂಪಯ್ಯ ಎನ್ನುವವರು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದಾಗ ಪಕ್ಕದಲ್ಲಿದ್ದವರು ತಡೆದು ಸಮಾಧಾನ ಹೇಳಿದರು. ಕೆಲ ಕಾರ್ಯಕರ್ತರು ರಸ್ತೆಯ ಮೇಲೆ ಉರುಳು ಸೇವೆ ಮಾಡಿದರು.

ADVERTISEMENT

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೇನೂರು ಕಾಂತರಾಜು ಮಾತನಾಡಿ, ಷಡಕ್ಷರಿ ಅವರು 40 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ದುಡಿದು ಎರಡು ಬಾರಿ ಶಾಸಕರಾಗಿ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಷಡಕ್ಷರಿ ಅವರಿಗೆ ಟಿಕೆಟ್ ನೀಡದೆ ವಂಚನೆ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ಕೆ.ಜಯಣ್ಣ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರ ಪರಿಚಯವೇ ಇಲ್ಲದ ವ್ಯಕ್ತಿಗೆ ಟಿಕೆಟ್ ಘೋಷಿಸಿರುವುದು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟು ಮಾಡಿದೆ ಎಂದರು.

ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಎಪಿಎಂಸಿ ಅಧ್ಯಕ್ಷ ಕುಂದೂರು ರವೀಶ್, ಉಪಾಧ್ಯಕ್ಷ ಬಜಗೂರು ಮಂಜುನಾಥ್, ಟೂಡಾ ಸದಸ್ಯ ಅಣ್ಣಯ್ಯ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಶಂಕರ್, ಸ್ಥಾಯಿಸಮಿತಿ ಅಧ್ಯಕ್ಷ ಎಂ.ಡಿ.ರವಿಕುಮಾರ್, ಸದಸ್ಯ ಶಿವಸ್ವಾಮಿ, ಸುರೇಶ್, ಹಿಂದುಳಿದ ವರ್ಗದ ಅಧ್ಯಕ್ಷ ಪ್ರಕಾಶ್ ಯಾದವ್, ಎಪಿಎಂಸಿ ಸದಸ್ಯ ಕಲ್ಕೆರೆ ಚಿಕ್ಕಣ್ಣ, ಮುಖಂಡರಾದ ಎ.ಟಿ.ಪ್ರಸಾದ್, ಮಹಮದ್ ಜುಬೇರ್, ಹಳ್ಳಿಮಂಜು, ತನ್ವೀರ್ ಉಲ್ಲ ಷರೀಪ್, ಜುಬೇರ್, ಶೇಖರ್ ಇದ್ದರು.

ರಾತ್ರಿಯೇ ಪ್ರತಿಭಟನೆ

ಕಾಂಗ್ರೆಸ್ ಟಿಕೆಟ್ ಷಡಕ್ಷರಿ ಅವರಿಗೆ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಕಾರ್ಯಕರ್ತರು, ಮುಖಂಡರು ಮುಖ್ಯ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ವರಿಷ್ಠರ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ಎಂ.ಸುರೇಶ್, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಮಡೇನೂರು ಕಾಂತರಾಜು ಇದ್ದರು.

ಸಾಮೂಹಿಕ ರಾಜೀನಾಮೆ ಬೆದರಿಕೆ

ಎಪಿಎಂಸಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಬಹುತೇಕ ಗ್ರಾಮ ಪಂಚಾಯಿತಿಗಳು, ಪಿಎಲ್‍ಡಿ ಬ್ಯಾಂಕ್, ಟಿ.ಎ.ಪಿ.ಸಿ.ಎಂ.ಎಸ್–ಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಎಲ್ಲ ಚುನಾಯಿತ ಪ್ರತಿನಿಧಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ಪಕ್ಷದ ಹುದ್ದೆಗಳಿಗೂ ರಾಜೀನಾಮೆ ನೀಡಲಿದ್ದೇವೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ತನೆ ನಡೆದಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.