ADVERTISEMENT

ನ. 1ರಿಂದ ಜಾತಿ ಗಣತಿ ಆರಂಭ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 9:40 IST
Last Updated 13 ಅಕ್ಟೋಬರ್ 2011, 9:40 IST

ತುಮಕೂರು: ಜಿಲ್ಲೆಯಲ್ಲಿ ನವೆಂಬರ್ 1ರಿಂದ ಡಿಸೆಂಬರ್ 30ರ ವರೆಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ನಡೆಯಲಿದೆ.

ಕೇಂದ್ರ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಮಂತ್ರಾಲಯ ನಿರ್ದೇಶನದಂತೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯನ್ನು ಪ್ರತಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನಡೆಸುತ್ತಿದೆ. ಇದಕ್ಕಾಗಿ ಸಮಿತಿಗಳನ್ನು ರಚಿಸುವಂತೆ ಆಯಾಯ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಮಿತಿ ರಚಿಸಲಾಗುತ್ತದೆ. ಅಲ್ಲದೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ `ಛಾರ್ಜ್~ ಸೆಂಟರ್‌ಗಳನ್ನು ತೆರೆಯಲಾಗುತ್ತದೆ.

ಜನಗಣತಿದಾರರು, ಮೇಲ್ವಿಚಾರಕರು, ಛಾರ್ಜ್ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಮತ್ತು ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಲಾಗುವುದು. ಅಲ್ಲದೆ ಆಯಾ ತಾಲ್ಲೂಕು ತಹಶೀಲ್ದಾರ್‌ಗಳು ಸಮೀಕ್ಷೆ ಛಾರ್ಜ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಸಮೀಕ್ಷೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್‌ಗಳು ಹಾಗೂ ವಿವಿಧ ಇಲಾಖೆ ಗ್ರಾಮಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಜನಗಣತಿದಾರರನ್ನಾಗಿ ನೇಮಕ ಮಾಡಲಾಗುತ್ತದೆ.

ಛಾರ್ಜ್ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಜನಗಣತಿದಾರರಿಗೆ ಈ ಸಮೀಕ್ಷೆ ಜನಗಣತಿ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮುಖ್ಯ ತರಬೇತುದಾರರಿಂದ ಅಗತ್ಯ ತರಬೇತಿ ನೀಡಲಾಗುತ್ತದೆ.

ಈ ಗಣತಿ ಮುಖ್ಯ ಉದ್ದೇಶ ದೇಶ, ರಾಜ್ಯ ಮತ್ತು ಜಿಲ್ಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬದವರನ್ನು ಗುರುತಿಸಿ ವಿವಿಧ ಯೋಜನೆಗಳ ಮೂಲಕ ಅವರನ್ನು ಸಬಲೀಕರಣ ಮಾಡುವುದಾಗಿದೆ.

2011ರ ಜನಗಣತಿ ಕಾರ್ಯದಲ್ಲಿ ಗುರುತಿಸಲಾಗಿರುವ ಮನೆಪಟ್ಟಿ, ಲೇಔಟ್, ಬ್ಲಾಕ್‌ಗಳು ಹಾಗೂ ನಕ್ಷೆಯಡಿ ಈ ಜನಗಣತಿ ಕಾರ್ಯವನ್ನು ನಡೆಸಲಾಗುವುದು. 4 ಎನ್ಯುಮರೇಷನ್ ಬ್ಲಾಕ್‌ಗಳಿಗೆ ಒಬ್ಬ ಗಣತಿದಾರ, ಆರು ಗಣತಿದಾರರಿಗೆ ಒಬ್ಬ ಮೇಲ್ವಿಚಾರಕ, 45 ಗಣತಿದಾರರಿಗೆ ಒಬ್ಬ ಮಾಸ್ಟರ್ ಟ್ರೈನರ್ ನೇಮಿಸಲಾಗುವುದು ಎಂದು ಗಣತಿ ಸಂಬಂಧ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದೊಡ್ಡಪ್ಪ, ಉಪಕಾರ್ಯದರ್ಶಿ ಯಾಲಕ್ಕಿಗೌಡ, ಯೋಜನಾ ನಿರ್ದೇಶಕ ಆಂಜನಪ್ಪ, ರಾಜ್ಯ ಗಣತಿ ನೋಡಲ್ ಅಧಿಕಾರಿ ವೀರಮಲ್ಲಯ್ಯ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.