ADVERTISEMENT

ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಪ್ರಚೋದನಾಕಾರಿ ಹೇಳಿಕೆ, ಶಾಂತಿ ಕದಡಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 15:46 IST
Last Updated 18 ಡಿಸೆಂಬರ್ 2019, 15:46 IST

ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆಗಳ ಒಕ್ಕೂಟ, ಸಿಐಟಿಯು, ಸಿಪಿಐ(ಎಂ), ದಲಿತಪರ ಸಂಘಟನೆ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್‌ ನಡೆಸುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ತುಮಕೂರು ಜಿಲ್ಲೆಯಾದ್ಯಂತ ಡಿ.18 ರಂದು ರಾತ್ರಿ 8 ರಿಂದ ಡಿ.21ರ ಮಧ್ಯರಾತ್ರಿ 12ರವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಾಶಪಡಿಸದಂತೆ ತಡೆಗಟ್ಟಲು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ಅಡಿ ನಿಷೇದಾಜ್ಞೆ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಷರತ್ತುಗಳು: ನಿಷೇದಾಜ್ಞೆ ಅವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ, ಇತರೆ ಕಾನೂನು ಬಾಹಿರ ಚಟುವಟಿಕೆ ನಡೆಸುವಂತಿಲ್ಲ. ಸ್ಪೋಟಕ ವಸ್ತುಗಳು, ಮಾರಕಾಸ್ತ್ರ ಕೊಂಡೊಯ್ಯುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮರೆವಣಿಗೆ ನಡೆಸುವಂತಿಲ್ಲ. ಮತೀಯ ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡುವುದು, ಘೋಷಣೆ ಕೂಗುವುದು, ಭಿತ್ತಿ ಪತ್ರಗಳನ್ನು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ.

ADVERTISEMENT

ಅಲ್ಲದೆ, ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವುದು, ಸುಳ್ಳು ವದಂತಿ ಹರಡುವಂತಿಲ್ಲ. ಸಾರ್ವಜನಿಕರ ಪ್ರಾಣ, ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವಂತಿಲ್ಲ. ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯಗಳನ್ನು ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ. ಈ ಷರತ್ತುಗಳನ್ನು ಉಲ್ಲಂಘಿಸುವವರನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ.

ಕ್ರೀಡಾಕೂಟ ಮುಂದೂಡಿಕೆ:

ನಿಷೇದಾಜ್ಞೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿ.19 ರಿಂದ 21ರವರೆಗೆ ಡಿ.ಎ.ಆರ್. ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಸಹ ಮುಂದೂಡಲಾಗಿದೆ. ಮುಂದೆ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.