ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೆ 176 ಮಂದಿ ಪರಿಶಿಷ್ಟರ ಮೇಲೆ ದೌರ್ಜನ್ಯ ವೆಸಗಿದ್ದು, 141 ಪ್ರಕರಣಗಳು ದಾಖಲಿಸಲಾಗಿದೆ. ಸಂತ್ರಸ್ತರಿಗೆ ₹1.19 ಕೋಟಿ ಪರಿಹಾರ ನೀಡಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಈ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿಯ 140 ಸಂತ್ರಸ್ತರಿಗೆ ₹97,38,500, ಪರಿಶಿಷ್ಟ ಪಂಗಡದ 36 ಸಂತ್ರಸ್ತರಿಗೆ ₹21,75,000 ಪರಿಹಾರ ಮಂಜೂರು ಮಾಡಲಾಗಿದೆ. ಈವರೆಗೆ 300ಕ್ಕೂ ಹೆಚ್ಚು ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಪ್ರಕರಣ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಪೊಲೀಸರು ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
‘ಪಾವಗಡ ತಾಲ್ಲೂಕಿನ ಸೋಲಾರ್ ಕಂಪನಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ಸರ್ಕಾರ ನಿಗದಿ ಪಡಿಸಿದ ವೇತನ ನೀಡುತ್ತಿಲ್ಲ’ ಎಂದು ಪರಿಶಿಷ್ಟ ಸಮುದಾಯದ ಮುಖಂಡರು ಸಭೆಯ ಗಮನಕ್ಕೆ ತಂದರು.
‘ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡವರಿಗೆ ನಿಯಮಾನುಸಾರ ಕನಿಷ್ಠ ವೇತನ ಪಾವತಿಸಬೇಕು. ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೂ ವೇತನ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶಾನಕ್ಕೆ ನಿಗದಿ ಪಡಿಸಿದ ಜಾಗಗಳನ್ನು 15 ದಿನದ ಒಳಗೆ ಸ್ವಚ್ಛಗೊಳಿಸಿ, ಮೂಲ ಸೌಕರ್ಯ ಒದಗಿಸಬೇಕು’ ಎಂದು ಹೇಳಿದರು.
ಉಪವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ತಹಶೀಲ್ದಾರ್ ರಾಜೇಶ್ವರಿ, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.