ADVERTISEMENT

ಕೋವಿಡ್ ಲಸಿಕೆ: 19,485 ಮಂದಿ ನೋಂದಣಿ

ಜಿಲ್ಲೆಯ 7 ಕೇಂದ್ರಗಳಲ್ಲಿ ತಾಲೀಮಿಗೆ ಜಿಲ್ಲಾಧಿಕಾರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 4:09 IST
Last Updated 9 ಜನವರಿ 2021, 4:09 IST
ಕೋವಿಡ್ ಲಸಿಕೆ ತಾಲೀಮಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು
ಕೋವಿಡ್ ಲಸಿಕೆ ತಾಲೀಮಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು   

ತುಮಕೂರು: ಜಿಲ್ಲೆಯ ಏಳು ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯ ತಾಲೀಮಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ‍ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

‘ಲಸಿಕೆ ಲಭ್ಯವಾದಾಗ ಯಾವುದೇ ಲೋಪ, ಆತಂಕ ಇಲ್ಲದಂತೆ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುವ ‌ನಿಟ್ಟಿನಲ್ಲಿ ಸರ್ಕಾರದ ಮಾರ್ಗ
ಸೂಚಿ ಅನ್ವಯ ಏಳು ಕಡೆ ಲಸಿಕಾ ವಿತರಣೆ ತಾಲೀಮು ನಡೆಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಗೆ ಲಸಿಕೆ ತರಲು ಪೂರ್ಣ ಸಿದ್ಧತೆಯಾಗಿದೆಯಾ? ಲಸಿಕೆ ಪಡೆದ ಫಲಾನುಭವಿ ವಿಶ್ರಾಂತಿ ಪಡೆದುಕೊಳ್ಳಲು ಲಸಿಕಾ ಕೇಂದ್ರಗಳಲ್ಲಿ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇದೆಯಾ? ಎಂಬುದನ್ನು ಪರಿಶೀಲಿಸಲಾಗಿದೆ ಎಂದರು.

ADVERTISEMENT

ಜಿಲ್ಲಾ ಆಸ್ಪತ್ರೆ, ಕ್ಯಾತ್ಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋತಿತೋಪು ಆರೋಗ್ಯ ಕೇಂದ್ರ, ಗುಬ್ಬಿ ತಾಲ್ಲೂಕು ಎಂ.ಎನ್.ಕೋಟೆ ಸಮುದಾಯ ಆರೋಗ್ಯ ಕೇಂದ್ರ, ಸಿದ್ಧಗಂಗಾ ಆಸ್ಪತ್ರೆ, ಶಿರಾಗೇಟ್‍ನ ಶ್ರೀದೇವಿ ವೈದ್ಯಕೀಯ ವಿದ್ಯಾಲಯದಲ್ಲಿ ಲಸಿಕಾ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ ಲಸಿಕೆ ಪಡೆಯಲು 19,485 ಮಂದಿ ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಗ್ರಹಿಸಲು ಜಿಲ್ಲೆಯಲ್ಲಿ 132 ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ವಿತರಣೆಗೆ ಸಂಬಂಧಿಸಿದಂತೆ ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ರಜನಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೇಶವರಾಜ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಅಧಿಕಾರಿ ಮೋಹನ್ ದಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.