ADVERTISEMENT

ತುಮಕೂರು ಜಿಲ್ಲೆಯಲ್ಲಿ ಜನವರಿಯಿಂದ ಏಪ್ರಿಲ್ ವರೆಗೆ 30 ಡೆಂಗಿ ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 23 ಮೇ 2023, 14:33 IST
Last Updated 23 ಮೇ 2023, 14:33 IST
ಡೆಂಗಿ ಸೊಳ್ಳೆ ಹರಡುವ ಈಡಿಸ್ ಸೊಳ್ಳೆಯ ಪ್ರಾತಿನಿಧಿಕ ಚಿತ್ರ
ಡೆಂಗಿ ಸೊಳ್ಳೆ ಹರಡುವ ಈಡಿಸ್ ಸೊಳ್ಳೆಯ ಪ್ರಾತಿನಿಧಿಕ ಚಿತ್ರ   

ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಏಪ್ರಿಲ್ ವರೆಗೆ 21 ಚಿಕುನ್‍ ಗುನ್ಯಾ, 30 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಸಾಂಕ್ರಾಮಿಕ ರೋಗ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ನಿರ್ದೇಶಿಸಿದರು.

ಮಲೇರಿಯಾ, ಡೆಂಗಿ ನಿಯಂತ್ರಣ ಸಂಬಂಧ ಸೋಮವಾರ ಸಭೆ ನಡೆಸಿದ ಅವರು, ‘ಇತ್ತೀಚಿನ ದಿನಗಳಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಬಂದಿದೆ. ಆದರೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಇದರ ನಿಯಂತ್ರಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಆರೋಗ್ಯ, ಆಶಾ ಕಾರ್ಯಕರ್ತೆಯರು ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ 15 ದಿನಗಳಿಗೆ ಒಮ್ಮೆ ಲಾರ್ವಾ ಸಮೀಕ್ಷೆ ಮಾಡಬೇಕು. ಸಂಶಯಾಸ್ಪದ ಪ್ರಕರಣಗಳಿಂದ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಿಸಬೇಕು. ರೋಗ ಪೀಡಿತ ಪ್ರದೇಶಗಳಲ್ಲಿ ತಾತ್ಕಾಲಿಕ ಅಥವಾ ಸಂಚಾರಿ ಚಿಕಿತ್ಸಾಲಯ ತೆರೆದು ಚಿಕಿತ್ಸೆ ನೀಡುವಂತೆ ಸೂಚಿಸಿದರು.

ADVERTISEMENT

ಚರಂಡಿಗಳಲ್ಲಿರುವ ಹೂಳು ತೆಗೆದು ನೀರು ಹರಿಯುವಂತೆ ನೋಡಿಕೊಳ್ಳಬೇಕು. ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಸೋರಿಕೆಯಾಗದಂತೆ ಕ್ರಮ ವಹಿಸಬೇಕು. ನೀರಿನ ಟ್ಯಾಂಕ್‍ಗಳನ್ನು ಭದ್ರವಾದ ಮುಚ್ಚಳದಿಂದ ಮುಚ್ಚಬೇಕು ಎಂದು ಗ್ರಾ.ಪಂ ಅಧಿಕಾರಿಗಳಿಗೆ ತಿಳಿಸಿದರು.

ಪಾರ್ಕ್‌ಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡುವ ಫಲಕ ಹಾಕಬೇಕು. ಧೂಮೀಕರಣ ಮಾಡಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಎನ್.ಪುರುಷೋತ್ತಮ್, ‘ಜನವರಿಯಿಂದ ಏಪ್ರಿಲ್‍ ವರೆಗೆ 726 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 30 ಡೆಂಗಿ ಪ್ರಕರಣಗಳು ದೃಢಪಟ್ಟಿವೆ. 464 ಮಾದರಿಗಳಲ್ಲಿ 21 ಚಿಕುನ್ ಗುನ್ಯಾ ಪ್ರಕರಣಗಳು ದೃಢಪಟ್ಟಿವೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.