ADVERTISEMENT

4 ಟಿಎಂಸಿ ನೀರು ಹಂಚಿಕೆಗೆ ಆಗ್ರಹ

ವಿವಿಧ ಸಂಘ ಸಂಸ್ಥೆಗಳಿಂದ ಬೈಕ್ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 2:18 IST
Last Updated 3 ಜುಲೈ 2021, 2:18 IST
ಪಾವಗಡ ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 4 ಟಿಎಂಸಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಬೈಕ್ ರ್‍ಯಾಲಿ ನಡೆಸಿದರು
ಪಾವಗಡ ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 4 ಟಿಎಂಸಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಬೈಕ್ ರ್‍ಯಾಲಿ ನಡೆಸಿದರು   

ಪಾವಗಡ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತಾಲ್ಲೂಕಿಗೆ 4 ಟಿಎಂಸಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಬೈಕ್ ರ‍್ಯಾಲಿ ನಡೆಸಿದರು.

ಮುಖಂಡ ನಾಗೇಂದ್ರ ಕುಮಾರ್ ಮಾತನಾಡಿ, ಹಲವು ದಶಕಗಳಿಂದ ಮಳೆಯಿಲ್ಲದೆ ನಿರಂತರವಾಗಿ ಬರಕ್ಕೆ ತುತ್ತಾಗಿರುವ ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕಡಿಮೆ ಪ್ರಮಾಣದ ನೀರು ಹಂಚಿಕೆ ಮಾಡಲಾಗಿದೆ. ಇದರಿಂದ ತಾಲ್ಲೂಕಿನ ಜನತೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಭೌಗೋಳಿಕವಾಗಿ ವಿಸ್ತೀರ್ಣವಾಗಿದೆ. ಮಳೆ ಪ್ರಮಾಣ ಕಡಿಮೆ ಇದ್ದು, ಫ್ಲೋರೈಡ್ ಸಮಸ್ಯೆ ಇದೆ. ಇಷ್ಟೆಲ್ಲಾ ಸಮಸ್ಯೆ ಇರುವುದು ತಿಳಿದಿದ್ದರೂ ಕೇವಲ ಅರ್ಧ ಟಿಎಂಸಿ ನೀರು ಹಂಚಿಕೆ ಮಾಡಿರುವುದು ಖಂಡನೀಯ ಎಂದು ದೂರಿದರು.

ADVERTISEMENT

ತಾಲೂಕು ರೈತ ಸಂಘದ ಅಧ್ಯಕ್ಷ ಜಿ.ನರಸಿಂಹ ರೆಡ್ಡಿ, ಈ ಹಿಂದೆ ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಿಂಗಳುಗಟ್ಟಲೇ ಮಾಡಿದ ಹೋರಾಟದಿಂದ ಆಗಿನ ಸರ್ಕಾರ ಯೋಜನೆಗೆ ಅನುದಾನ ಬಿಡುಗಡೆ ಮಾಡಿತು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಆದರೆ ಅರ್ಧ ಟಿಎಂಸಿ ನೀರು ತಾಲ್ಲೂಕಿಗೆ ಸಾಕಾಗುವುದಿಲ್ಲ ಎಂದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು. ಬೇಡಿಕೆ ಈಡೇರಿಸದಿದ್ದಲ್ಲಿ
ಹೋರಾಟ ಮುಂದುವರೆಸುವುದಾಗಿ ಎಚ್ಚರಿಸಿದರು.

ಮುಖಂಡ ನಾಗೇಂದ್ರ, ಜಯ ಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷ ಗೋವರ್ಧನ್, ಅಶ್ವತ್ಥನಾರಾಯಣ ಸ್ವಾಮೀಜಿ, ಆಟೊ ಚಾಲಕರ ಸಂಘದ ಅಧ್ಯಕ್ಷ ನಾಗರಾಜು, ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಮುಖಂಡ ಮಂಜುನಾಥ್, ಶಶಿಕಲಾ, ಕಿರಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.