ADVERTISEMENT

40 ಸಾವಿರ ನಿವೇಶನ ವಿತರಣೆಗೆ ಯೋಜನೆ: ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 2:47 IST
Last Updated 15 ಮಾರ್ಚ್ 2024, 2:47 IST
<div class="paragraphs"><p>ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು,&nbsp;ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್, ಎಂಜಿನಿಯರ್ ವಿವೇಕಾನಂದ ಜಿ.ವಾರ್ಕರ್, ಸ್ಲಂ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ </p></div>

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್, ಎಂಜಿನಿಯರ್ ವಿವೇಕಾನಂದ ಜಿ.ವಾರ್ಕರ್, ಸ್ಲಂ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ

   

ತುಮಕೂರು: ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಸುಮಾರು 40 ಸಾವಿರ ನಿವೇಶನಗಳನ್ನು ವಿತರಿಸಲು ಯೋಜನೆ ಸಿದ್ಧಪಡಿಸಿದ್ದು, ಅದಕ್ಕಾಗಿ 2 ಸಾವಿರ ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.

ಮಹಾನಗರ ಪಾಲಿಕೆ, ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

ಪ್ರತಿ ತಾಲ್ಲೂಕಿನಲ್ಲಿ 2 ಸಾವಿರದಿಂದ 3 ಸಾವಿರ ನಿವೇಶನ ವಿತರಿಸಲು ಜಾಗವನ್ನು ಗುರುತಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ (ಟೂಡಾ) ವತಿಯಿಂದ ನಗರದ ಹೊರವಲಯದಲ್ಲಿ ಸಾಕಷ್ಟು ವರ್ಷಗಳಿಂದ ಹೊಸ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ವಿತರಣೆ ಮಾಡಿಲ್ಲ. ಈ ನಿಟ್ಟಿನಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ವಸತಿ ಯೋಜನೆಗಳಡಿ ದಿಬ್ಬೂರು ಸೇರಿದಂತೆ ಇತರೆಡೆಗಳಲ್ಲಿ ನಿರ್ಮಿಸಿರುವ ಮನೆಗಳಲ್ಲಿ ಕಳ್ಳರು, ಮಾದಕ ವಸ್ತು ಮಾರಾಟ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರು ವಾಸಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹವರನ್ನು ಮನೆಯಿಂದ ಖಾಲಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ‘ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ರಾಜ್ಯದಿಂದ ₹ 2 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ವಾಜಪೇಯಿ ನಗರ ವಸತಿ ಯೋಜನೆಯಡಿ ರಾಜ್ಯದಿಂದ ₹ 1.20 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ₹ 1.50 ಲಕ್ಷ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ರಾಜ್ಯದಿಂದ ₹ 6 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ ಅನುದಾನ ಸಿಗುತ್ತಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಪಕ್ಕಾ ಮನೆಗಾಗಿ ₹ 3 ಲಕ್ಷ, ಮನೆ ದುರಸ್ತಿಗೆ ₹ 50 ಸಾವಿರ ನೆರವು ನೀಡಲಾಗುತ್ತಿದೆ’ ಎಂದು ವಿವರಿಸಿದರು.

ನಗರ ವ್ಯಾಪ್ತಿಯಲ್ಲಿ 30 ಪ್ರದೇಶಗಳನ್ನು ಅಧಿಕೃತ ಕೊಳೆಗೇರಿಗಳೆಂದು ಘೋಷಿಸಲಾಗಿದ್ದು, 7,959 ಕುಟುಂಬಗಳ 46,727 ಜನರು ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಒಟ್ಟು 1,200 ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗಿದೆ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿವೇಕಾನಂದ ಜಿ.ವಾರ್ಕರ್, ಸ್ಲಂ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.