ADVERTISEMENT

ತುಮಕೂರು: ‘ಅತಿಥಿ’ಗೆ ವಿದ್ಯಾರ್ಥಿ ಬೆಂಬಲ: ಎಬಿವಿಪಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 7:54 IST
Last Updated 16 ಡಿಸೆಂಬರ್ 2023, 7:54 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ತುಮಕೂರು: ಸೇವೆ ಕಾಯಮಾತಿಗೆ ಆಗ್ರಹಿಸಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೈಗೊಂಡಿರುವ ಮುಷ್ಕರ ಮುಂದುವರಿದಿದ್ದು, ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ಕಲಿಕೆ ಕುಂಠಿತವಾಗಿದೆ. ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿವೆ. ಆದರೆ ತರಗತಿಗಳೇ ನಡೆಯದೆ ಪರೀಕ್ಷೆ ಬರೆಯುವುದು ಹೇಗೆ? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಅವರು ಗೌರವಯುತವಾಗಿ ಜೀವನ ಸಾಗಿಸಲು ನೆರವಾಗಬೇಕು. ಸರ್ಕಾರ ವಿಳಂಬ ನೀತಿ ಅನುಸರಿಸದೆ ಕೂಡಲೇ ಇತ್ತ ಗಮನ ಹರಿಸಬೇಕು. ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ಪ್ರತಿ ತಿಂಗಳ ಸಂಬಳ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಪ್ರತಿ ಬಾರಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಉಪನ್ಯಾಸಕರ ಸಮಸ್ಯೆಯಾಗುತ್ತಿದೆ. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಬೋಧನೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಶೀಘ್ರವೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಬೇಕು. ಎಲ್ಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಗಣೇಶ್‌, ಪದಾಧಿಕಾರಿಗಳಾದ ಸುನೀಲ್‌, ಭರತ್‌, ಉದಯ್‌, ಅಶೋಕ್‌, ರವೀಶ್‌, ಪುನೀತ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.