ತುಮಕೂರು: ಅನರ್ಹರು ಹೊಂದಿರುವ ಅಂತ್ಯೋದಯ, ಆದ್ಯತಾ ಪಡಿತರ ಚೀಟಿಗಳನ್ನು (ಬಿಪಿಎಲ್) ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮನವಿ ಮಾಡಿದ್ದಾರೆ.
ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಸರ್ಕಾರಿ ನೌಕರರು, ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು ಬಿಪಿಎಲ್ ಕಾರ್ಡ್ ವಾಪಸ್ ಮಾಡಬೇಕು ಎಂದು ಹೇಳಿದ್ದಾರೆ.
ಆರ್ಥಿಕವಾಗಿ ಸಬಲರು ಮತ್ತು ಇತರೆ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಪದೇ ಪದೇ ಮನವಿ ಮಾಡಲಾಗಿದೆ. ಇದಕ್ಕೆ ಕೆಲವರು ಸ್ಪಂದಿಸಿ ಬಿಪಿಎಲ್ ಕಾರ್ಡ್ ಹಿಂದಿರುಗಿಸಿ ಎಪಿಎಲ್ ಕಾರ್ಡ್‌ಗಳನ್ನು ಪಡೆದಿದ್ದಾರೆ. ತಕ್ಷಣವೇ ತಹಶೀಲ್ದಾರ್‌ಗೆ ಒಪ್ಪಿಸಿ ಎಪಿಎಲ್ ಕಾರ್ಡ್ ಪಡೆಯಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಾನದಂಡ: ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ಗಿಂತ ಹೆಚ್ಚಿನ ಒಣ ಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿದವರು, ಜೀವನೋಪಾಯಕ್ಕಾಗಿ ಸ್ವಂತ ಓಡಿಸಲು ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬವನ್ನು ಹೊರತುಪಡಿಸಿ 4 ಚಕ್ರದ ವಾಹನ ಹೊಂದಿರುವ ಕುಟುಂಬಗಳು, ವಾರ್ಷಿಕ ₹1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಅಂತ್ಯೋದಯ, ಬಿಪಿಎಲ್ ಕಾರ್ಡ್ ಪಡೆದುಕೊಂಡಿರಬಾರದು ಎಂದು ತಿಳಿಸಿದ್ದಾರೆ. 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 6,40,081 ಕುಟುಂಬಗಳು ದಾಖಲಾಗಿದ್ದು, 49,389 ಅಂತ್ಯೋ ದಯ ಅನ್ನ, 6,12,331 ಆದ್ಯತಾ ಸೇರಿ ಟ್ಟು 6,61,720 ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ಹಾಗೂ 54,702 ಕುಟುಂಬಗಳಿಗೆ ಎಪಿಎಲ್ ಪಡಿತರ ಚೀಟಿ ನೀಡಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.