ADVERTISEMENT

‌ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ: ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ

ಆಸ್ಪತ್ರೆ, ವಸತಿ ನಿಲಯಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 4:27 IST
Last Updated 14 ಆಗಸ್ಟ್ 2024, 4:27 IST
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ರೋಗಿಗಳಿಂದ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಾಹಿತಿ ಪಡೆದರು
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ರೋಗಿಗಳಿಂದ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಾಹಿತಿ ಪಡೆದರು   

ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲ ಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು ರೋಗಿಗಳಿಂದ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸವಲತ್ತು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಈ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ದಿನಕ್ಕೆ 800 ಮಂದಿ ಹೊರ ರೋಗಿಗಳಿಗೆ ಕೇ‌ವಲ ಮೂವರು ಮಂದಿ ವೈದ್ಯರು ಚಿಕಿತ್ಸೆ ನೀಡಬೇಕಿದೆ. ವೈದ್ಯರ ಕೊರತೆ ನೀಗಿಸಬೇಕಿದೆ ಎಂದರು.

ADVERTISEMENT

ತಾಲ್ಲೂಕಿನ ಸಿಕೆ ಪುರ, ಪಳವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಮೂಲ ಸವಲತ್ತು, ವೈದ್ಯರ ಕೊರತೆ ಇದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ಲಭಿಸುತ್ತಿಲ್ಲ ಎಂದರು.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಮೀಸಲಾತಿ ಪಡೆದು ಶಿಕ್ಷಣ, ಸವಲತ್ತು ಪಡೆಯಲಾಗುತ್ತಿದೆ. ವಿದ್ಯಾರ್ಥಿನಿಯರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಸೂಚನಾ ಫಲಕದಲ್ಲಿರುವ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ವಸತಿ ನಿಲಯದಲ್ಲಿ ಡಿಜಿಟಲ್ ತರಗತಿ ಆರಂಭವಾಗಿ ವರ್ಷವಾದರೂ ಈವರೆಗೆ ತರಗತಿ ತೆಗೆದುಕೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಶೀಘ್ರ ಡಿಜಿಟಲ್ ತರಗತಿಗೆ ಚಾಲನೆ ನೀಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ವರದರಾಜು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಜಾನಕಿರಾಂ, ತಾಲ್ಲೂಕು ವೈದ್ಯಾಧಿಕಾರಿ ಡಾ ಕಿರಣ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.