ADVERTISEMENT

ತಾತ್ಕಾಲಿಕವಾಗಿ ಹೋರಾಟ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 12:10 IST
Last Updated 11 ಡಿಸೆಂಬರ್ 2019, 12:10 IST
   

ತುಮಕೂರು: ಅಂಗನವಾಡಿ ಕೇಂದ್ರಗಳಲ್ಲೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ಮಂಗಳವಾರ ಮುಖ್ಯಮಂತ್ರಿಗಳು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದರು. ಆದರೆ, ತಮಗೆ ಮೌಖಿಕ ಆದೇಶದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಲಿಖಿತ ಆದೇಶ ನೀಡುವವರೆಗೂ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಬುಧವಾರವೂ ಪ್ರತಿಭಟನೆ ಮುಂದುವರೆಸಿದ್ದರು.

ಸರ್ಕಾರದ ಉಪ ಕಾರ್ಯದರ್ಶಿಗಳು ಈ ಬಗ್ಗೆ ಲಿಖಿತವಾಗಿ ಡಿಸೆಂಬರ್ 16ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್‌.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದ ಸಾಧಕ ಬಾಧಕಗಳ ಕುರಿತು ಚರ್ಚಿಸಲು ಸಭೆ ಕರೆದಿರುವ ಬಗ್ಗೆ ಸಭಾ ಸೂಚನಾ ಪತ್ರ ನೀಡಿದ್ದಾರೆ. ಇದಕ್ಕೆ ಗೌರವ ನೀಡಿ ನಾವು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದೇವೆ ಎಂದು ರಾಜ್ಯ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದ್ದಾರೆ.

ADVERTISEMENT

ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ: ನಾವು ಸರ್ಕಾರದ ಮಾತನ್ನು ಗೌರವಿಸಿ ಹೋರಾಟ ಹಿಂಪಡೆದಿದ್ದೇವೆ. ಅಕಸ್ಮಾತ್ ಡಿಸೆಂಬರ್ 16 ರಂದು ನಮ್ಮ ಬೇಡಿಕೆ ಈಡೇರದಿದ್ದರೆ ಡಿ.17 ರಿಂದ ನಮ್ಮ ಹೋರಾಟ ಇನ್ನೊಂದು ಸ್ವರೂಪ ಪಡೆದುಕೊಳ್ಳಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.