ADVERTISEMENT

ತುಮಕೂರು ಎಪಿಎಂಸಿ ಅಧ್ಯಕ್ಷರಾಗಿ ಉಮೇಶ್‍ಗೌಡ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 16:27 IST
Last Updated 29 ಜುಲೈ 2020, 16:27 IST
ಎಪಿಎಂಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ ಗೌಡ ಅಭಿನಂದಿಸಿದರು
ಎಪಿಎಂಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ ಗೌಡ ಅಭಿನಂದಿಸಿದರು   

ತುಮಕೂರು: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷರಾಗಿ ಹೆಬ್ಬೂರು ಹೋಬಳಿ ಸಿರಿವರದ ಉಮೇಶ್‍ಗೌಡ ಮತ್ತು ಉಪಾಧ್ಯಕ್ಷರಾಗಿ ಬೆಳ್ಳಾವಿ ಹೋಬಳಿ ಕೊಟ್ಟನಹಳ್ಳಿ ಗೊಲ್ಲರಹಟ್ಟಿಯ ಶಿವರಾಜ್ ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಬಿಜೆಪಿ ಸರ್ಕಾರ 15 ಮಂದಿ ನಿರ್ದೇಶಕರನ್ನು ನಾಮನಿರ್ದೇಶನ ಮಾಡಿದೆ.

ಈ ವೇಳೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಕೋರಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್‍ಗೌಡ, ‘ರೈತರ ಬೆಳೆಗೆ ಸೂಕ್ತ ಬೆಲೆ ಕೊಡಿಸುವ ಮಾರುಕಟ್ಟೆ ಇದಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸಬೇಕು’ ಎಂದು ಸಲಹೆ ಮಾಡಿದರು.

ಅಧ್ಯಕ್ಷ ಉಮೇಶ್‍ಗೌಡ ಮಾತನಾಡಿ, ‘ನನ್ನ ರಾಜಕೀಯ ಗುರುಗಳಾದ ಬಿ.ಸುರೇಶ್‍ಗೌಡ ಆಶೀರ್ವಾದದಿಂದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಕೊರೊನಾ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳಿಗೆ ಲಾಭ ಸಿಗದೆ ಸಂಕಷ್ಟಕ್ಕೊಳಗಾಗಿದ್ದಾರೆ. ಎಪಿಎಂಸಿ ಮೂಲಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ’ ಎಂದು ಹೇಳಿದರು.

ADVERTISEMENT

ಉಪಾಧ್ಯಕ್ಷ ಶಿವರಾಜ್, ‘ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಖ್ಯವಾಗಿ ಮಾರುಕಟ್ಟೆಯಲ್ಲಿ ಶೋಷಣೆ ಆಗದಂತೆ ನಿಗಾವಹಿಸಲು, ಮೂಲ ಸೌಕರ್ಯಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಾಗುವುದು’ ಎಂದರು.

ಸಂಭ್ರಮಾಚರಣೆ: ಅಧಿಕಾರ ಸ್ವೀಕಾರಕ್ಕೂ ಮುನ್ನ ಎಪಿಎಂಸಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜಿ.ಪಂ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸದಸ್ಯ ವೈ.ಎಚ್.ಹುಚ್ಚಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ರಮೇಶ್, ಉಪಾಧ್ಯಕ್ಷ ಶಾಂತಕುಮಾರ್, ಮಾಜಿ ಅಧ್ಯಕ್ಷ ಗಂಗಾಂಜಿನೇಯ, ಮುಖಂಡರಾದ ಸಿದ್ದೇಗೌಡ, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.