
ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅನುಮೋದನೆ ನೀಡಿದ್ದಾರೆ.
ಕೊಳವೆ ಬಾವಿಗಳನ್ನು ಕೊರೆಸಿದ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಿದರು.
ಸಾರ್ವಜನಿಕರಿಗೆ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿಗಳ ನೀರಿನ ಗುಣಮಟ್ಟ ಕಾಪಾಡಲು ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರು ಸುರಕ್ಷಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ವರದಿ ನೀಡುವಂತೆ ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡುತ್ತಿರುವ ಕೊಳವೆ ಬಾವಿಗಳಿಗೆ ಕಡ್ಡಾಯವಾಗಿ ಕ್ಲೋರಿನೇಷನ್ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ, ಸುರಕ್ಷಿತ ಕುಡಿಯುವ ನೀರು ಒದಗಿಸಬೇಕು ಎಂದರು.
ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ 6 ತಿಂಗಳಾದರೂ ಕಾಮಗಾರಿ ಆರಂಭಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣವೇ ಸಮಸ್ಯೆ ಬಗೆಹರಿಸಿ ಕಾಮಗಾರಿ ಪ್ರಾರಂಭಿಸಬೇಕು. ಆರಂಭವಾಗಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕೆಲಸ ಪೂರ್ಣಗೊಂಡಿರುವ ಹಳ್ಳಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಅಂತಹ ಗ್ರಾಮಗಳನ್ನು ‘ಹರ್ ಘರ್ ಜಲ್’ ಗ್ರಾಮಗಳೆಂದು ಘೋಷಿಸುವಂತೆ ನಿರ್ದೇಶಿಸಿದರು.
ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.