ADVERTISEMENT

ಆಯುಷ್ಮಾನ್‌ ಚೀಟಿ ಇಲ್ಲದಿದ್ದರೂ ಆರೋಗ್ಯ ಸೇವೆ

ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 16:11 IST
Last Updated 5 ಅಕ್ಟೋಬರ್ 2019, 16:11 IST
ಕೆ.ರಾಕೇಶ್‌ಕುಮಾರ್‌
ಕೆ.ರಾಕೇಶ್‌ಕುಮಾರ್‌   

ತುಮಕೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಚೀಟಿ ಇಲ್ಲದವರು ಸಹ ಬಿ.ಪಿ.ಎಲ್. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತೋರಿಸಿ ಆರೋಗ್ಯ ಸೇವೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದರು.

ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಅವರು ಶನಿವಾರ ಮಾತನಾಡಿದರು.

ಜಿಲ್ಲೆಯಲ್ಲಿ 131 ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಗುತ್ತಿದೆ. ಇಲ್ಲಿಯವರೆಗೆ 2.72 ಲಕ್ಷ ಕಾರ್ಡ್‍ಗಳನ್ನು ವಿತರಿಸಲಾಗಿದೆ. ಈ ಯೋಜನೆಯ ಸೇವೆಯನ್ನು ಪಡೆಯಲು ಅನುಕೂಲವಾಗುವಂತೆ ಅರ್ಹರಿಗೆ ಕಾರ್ಡ್ ವಿತರಿಸಲು ಕ್ರಮ ವಹಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ADVERTISEMENT

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಇಲ್ಲದವರು ಸಹ ಆರೋಗ್ಯ ಸೇವೆ ಪಡೆಯಬಹುದು ಎಂಬ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಅಲ್ಲದೆ ಆಸ್ಪತ್ರೆಯಲ್ಲಿ ಈ ಕುರಿತು ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ತಿಳಿಸಿದರು.

ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೌಂಟರ್‌ ತೆರೆದು ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 15 ಖಾಸಗಿ ಆಸ್ಪತ್ರೆಗಳು ಈ ಸೇವೆಯನ್ನು ಒದಗಿಸುತ್ತಿವೆ. ಈ ಯೋಜನೆಯಡಿ ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಿರುವ ಕುರಿತು ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸಾಂಕ್ರಾಮಿಕವಾಗಿ ಹರಡುವ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ, ಎಚ್1ಎನ್1, ಕ್ಷಯ, ಕುಷ್ಠರೋಗದಂತಹ ಕಾಯಿಲೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ತಹಶೀಲ್ದಾರರಿಗೆ ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ, ಡಾ.ಪುರುಷೋತ್ತಮ್, ಡಾ.ಚೇತನ್, ಆರ್.ಸಿ.ಎಚ್.ಅಧಿಕಾರಿ ಡಾ.ಕೇಶವರಾಜ್ ಇದ್ದರು.

‘ಶಾಲೆ ಸುತ್ತ ತಂಬಾಕು ನಿಷೇಧಿಸಿ’
ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್‍ಕುಮಾರ್ ಸೂಚಿಸಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಭೆಯಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್, ಪೊಲೀಸ್ ಇನ್‌ಸ್ಪೆಕ್ಟರ್, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಜಂಟಿಯಾಗಿ ಶಾಲೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಶೇ.100ರಷ್ಟು ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವ ಕುರಿತು ಮುಂದಿನ ಸಭೆಯಲ್ಲಿ ದೃಢೀಕೃತ ವರದಿ ನೀಡಬೇಕು ಅವರು ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.