
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿನೀಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಈಶ್ವರ ಖಂಡ್ರೆ ಅವರು ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ತುಮಕೂರು: ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯಿಂದ ಅಭಿವೃದ್ಧಿ ಪಡಿಸುತ್ತಿರುವ ಬೃಹತ್ ಉದ್ಯಾನಕ್ಕೆ ‘ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಮಹಾಸಭಾ ಅಧ್ಯಕ್ಷರಾದ ನಂತರ ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿನೀಡಿ, ಸಿದ್ಧಲಿಂಗ ಸ್ವಾಮೀಜಿ ಜತೆಗೆ ಮಾತುಕತೆ ನಡೆಸಿದ ಸಮಯದಲ್ಲಿ ಈ ವಿಷಯ ತಿಳಿಸಿದ್ದಾರೆ.
ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಬಸವಣ್ಣ ಅವರನ್ನು ರಾಜ್ಯ ಸರ್ಕಾರ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ. ಲಾಲ್‌ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಬೃಹತ್ ಉದ್ಯಾನ ಅಭಿವೃದ್ಧಿ ಪಡಿಸಲಾಗುತ್ತಿದೆ. ಅದಕ್ಕೆ ಬಸವಣ್ಣ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಮೊದಲ ಹಂತದಲ್ಲಿ ಉದ್ಯಾನದ ಅಭಿವೃದ್ಧಿ ಕಾಮಗಾರಿಗೆ ₹50 ಕೋಟಿ ನೀಡಲು ಸರ್ಕಾರ ಸಮ್ಮತಿಸಿದ್ದು, ಸಿಎಸ್ಆರ್ ನೆರವು ಪಡೆದು 2 ವರ್ಷದೊಳಗೆ ಉದ್ಯಾನ ಅಭಿವೃದ್ಧಿಪಡಿಸಿ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.