ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಜ.8, 9ರಂದು ರಾಷ್ಟ್ರವ್ಯಾಪ್ತಿ ಮುಷ್ಕರ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 11:34 IST
Last Updated 5 ಜನವರಿ 2019, 11:34 IST
ಎ.ವಿಜಯ ರಾಘವನ್
ಎ.ವಿಜಯ ರಾಘವನ್   

ತುಮಕೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಲ್ಲಿ ಕೋಮುದ್ವೇಷ ಮೂಡಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ‌ ಅಲ್ಪಸಂಖ್ಯಾತರ ಹಾಗೂ ದಲಿತರ ಮೇಲೆ ದಾಳಿ ಹೆಚ್ಚುತ್ತಿದ್ದು ಇದರ ವಿರುದ್ಧ ಯುವಜನರು ಹೋರಾಡಬೇಕಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ಸದಸ್ಯ ಎ.ವಿಜಯ ರಾಘವನ್ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ. ಈ ಸರ್ಕಾರದ ಆರ್ಥಿಕ ನೀತಿಗಳಿಂದ ಜನರ ಬದುಕಿನ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜ.8 ಮತ್ತು 9 ರಂದು ರಾಷ್ಟ್ರವ್ಯಾಪ್ತಿ ಮುಷ್ಕರವನ್ನು ಎಡಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿವೆ. ನಾಗರಿಕರು ಇದನ್ನು ಬೆಂಬಲಿಸಬೇಕು ಎಂದು ಕೋರಿದರು.

ADVERTISEMENT

‘ಕೃಷಿ ಬಿಕ್ಕಟ್ಟಿನಿಂದ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ. ಸ್ವಾಮಿನಾಥನ್‌ ಆಯೋಗ ಶಿಫಾರಸ್ಸು ಜಾರಿಗೊಳಿಸುತ್ತಿಲ್ಲ’ ಎಂದು ದೂರಿದರು.

ನೋಟು ಅಮಾನ್ಯೀಕರಣ ಮತ್ತು ಸರಕ ಮತ್ತು ಸೇವಾ ತೆರಿಗೆ ನೀತಿಯಿಂದ ದೇಶದ ಆರ್ಥಿಕತೆ ಕುಸಿದಿದೆ. ಉದ್ಯೋಗಗಳು ಇಲ್ಲವಾಗಿವೆ. ಕೇವಲ ಕಾರ್ಪೊರೇಟ್‌ ವಲಯದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಎಂ ರಾಜ್ಯ ಮಂಡಳಿ ಸದಸ್ಯ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಪ್ರಾಂತ ರೈತ ಸಂಘದ ಬಿ.ಉಮೇಶ್ ಹಾಗೂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.