ADVERTISEMENT

ಅಸಮರ್ಪಕ ನೀರು ಪೂರೈಕೆ; ಶಿಸ್ತು ಕ್ರಮ: ಶುಭಾ ಕಲ್ಯಾಣ್ ಎಚ್ಚರಿಕೆ

ವಿಡಿಯೊ ಸಂವಾದದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 13:35 IST
Last Updated 9 ಏಪ್ರಿಲ್ 2019, 13:35 IST
ಶುಭಾ ಕಲ್ಯಾಣ್
ಶುಭಾ ಕಲ್ಯಾಣ್   

ತುಮಕೂರು: ಬೇಸಿಗೆ ಕಾಲವಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ ನೋಡಲ್ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನೀರು ಪೂರೈಕೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ವಾಟರ್‌ಮೆನ್‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಪಿಡಿಒ ಹಾಗೂ ಇಒಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು, ಕಾರ್ಯಪಾಲಕ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳೊಂದಿಗೆ ವಿಡಿಯೊ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಕುಡಿಯುವ ನೀರಿನ ಸಮಸ್ಯೆಯುಳ್ಳ ಹಳ್ಳಿಗಳ ಪಿಡಿಒಗಳು ಹಾಗೂ ನೋಡಲ್ ಅಧಿಕಾರಿಗಳು ಕೈಗೊಂಡಿರುವ ಕ್ರಮ, ಪ್ರತಿ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿರುವ ಹಳ್ಳಿಗಳ ವಿವರ ಹಾಗೂ ದೂರುಗಳ ಬಗ್ಗೆ ಅವರು ಪರಿಶೀಲಿಸಿದರು.

ADVERTISEMENT

ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯೆ ತಲೆದೋರದಂತೆ ನೇಮಕ ಮಾಡಲಾಗಿರುವ ಜಿಲ್ಲೆಯ ಎಲ್ಲ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ವಾಟರ್‌ಮೆನ್‌ಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನಿಗಾವಹಿಸಬೇಕು. ಸಮಸ್ಯೆ ಉಂಟಾದಲ್ಲಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಬೇಸಿಗೆ ಕಾಲದಲ್ಲಿ ಮೋಟರ್ ಪಂಪ್ ಕೆಟ್ಟು ಹೋಗಿದೆ ಎಂಬ ಯಾವುದೇ ದೂರುಗಳು ಬಾರದಂತೆ ಪ್ರತಿ ಗ್ರಾಮ ಪಂಚಾಯಿತಿಗಳೂ ಒಂದು ಹೆಚ್ಚುವರಿ ಪಂಪ್ ಹೊಂದಿರಬೇಕು ಎಂದು ಸೂಚಿಸಿದರು.

ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಕೊಳವೆಬಾವಿಗಳಲ್ಲಿ ನೀರು ಬತ್ತುವ ಸಾಧ್ಯತೆ ಹೆಚ್ಚಾಗಿರುತ್ತದೆ. ತುರ್ತು ಸಂದರ್ಭಗಳಲ್ಲಿ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅನ್ಯಮಾರ್ಗವಿಲ್ಲದಿದ್ದಲ್ಲಿ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಸಬೇಕು. ನೀರಿನ ಸಮಸ್ಯೆ ಬಾರದಂತೆ ವಾಸ್ತವ ಪರಿಸ್ಥಿತಿ ಅವಲೋಕಿಸಿ ಜಿಲ್ಲಾ ಮಟ್ಟದ ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಂವಾದದಲ್ಲಿ ಮುಖ್ಯ ಯೋಜನಾಧಿಕಾರಿ ಬಾಲರಾಜು, ಲೆಕ್ಕಪತ್ರಾಧಿಕಾರಿ ಕನಕರಾಜು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಫ್ತಿಕಾರ್ ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.