ADVERTISEMENT

ಚಿಕ್ಕನಾಯಕನಹಳ್ಳಿ: 16ಕ್ಕೆ ಆರೋಗ್ಯ, ಕಿಡ್ನಿ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 6:04 IST
Last Updated 12 ಫೆಬ್ರುವರಿ 2026, 6:04 IST
<div class="paragraphs"><p>ಕಿಡ್ನಿ  </p></div>

ಕಿಡ್ನಿ

   

ಚಿಕ್ಕನಾಯಕನಹಳ್ಳಿ: ‘ಜನಸ್ಪಂದನಾ’ ಕಾರ್ಯಕ್ರಮ ಯಶಸ್ವಿಯಾಗಿ 100ನೇ ವಾರಕ್ಕೆ ಕಾಲಿಟ್ಟಿರುವ ಸಂಭ್ರಮದ ಅಂಗವಾಗಿ ಸಾರ್ವಜನಿಕರಿಗಾಗಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ವಿಶೇಷ ಕಿಡ್ನಿ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 16ರಂದು ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬೆಳಿಗ್ಗೆಯಿಂದ ಶಿಬಿರ ನಡೆಯಲಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಎಸ್.ಬಿ. ಚಾರಿಟಬಲ್ ಟ್ರಸ್ಟ್ ಹಾಗೂ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶಿಬಿರ ಆಯೋಜನೆಯಾಗಿದೆ ಎಂದರು.

ADVERTISEMENT

ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ, ನಿಮಾನ್ಸ್, ಕಿದ್ವಾಯಿ, ಮಿಂಟೋ ಸೇರಿದಂತೆ ಪ್ರತಿಷ್ಠಿತ ಆಸ್ಪತ್ರೆಗಳ 500ಕ್ಕೂ ಹೆಚ್ಚು ತಜ್ಞ ವೈದ್ಯರು ಮತ್ತು 500 ವೈದ್ಯಕೀಯ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ಸ್ಕ್ಯಾನಿಂಗ್, ಇಸಿಜಿ, ಎಕೋ ಸ್ಕ್ಯಾನಿಂಗ್, ರಕ್ತ ಮತ್ತು ಮೂತ್ರ ಪರೀಕ್ಷೆ ಹಾಗೂ ಅಗತ್ಯ ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.

ಆದಿಚುಂಚನಗಿರಿ ಆಸ್ಪತ್ರೆ ಕಿಡ್ನಿ ತಜ್ಞ ಡಾ.ನರೇಂದ್ರ ಎಸ್. ಮಾತನಾಡಿ, ಬಡವರಿಗೆ ಕಿಡ್ನಿ ಚಿಕಿತ್ಸೆ ಗಗನಕುಸುಮವಾಗಬಾರದು ಎಂಬ ಉದ್ದೇಶದಿಂದ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಆರಂಭಿಸಲಾಗಿದೆ. ಶಿಬಿರದಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಗಳ ಬಗ್ಗೆ ವಿಶೇಷ ತಪಾಸಣೆ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ವಿ. ಸೋಮಣ್ಣ ಭಾಗವಹಿಸಲಿದ್ದಾರೆ ಎಂದರು.

ತಹಶೀಲ್ದಾರ್ ಮಮತಾ ಎಂ, ಡಾ.ಧರ್ಮೇಂದ್ರ, ನಂದೀಶ್, ಕುಮಾರ್ ಆಸ್ಪತ್ರೆಯ ಡಾ.ಶ್ರೀದರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.