ADVERTISEMENT

ಬಾಲ್ಯ ವಿವಾಹ ಅನಿಷ್ಟ ಪದ್ಧತಿ: ಕೆ.ವಿದ್ಯಾಕುಮಾರಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 13:05 IST
Last Updated 25 ಫೆಬ್ರುವರಿ 2023, 13:05 IST
ತುಮಕೂರಿನಲ್ಲಿ ಶುಕ್ರವಾರ ಬಾಲ್ಯ ವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಯುವ ಮೇಳವನ್ನು ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ನ್ಯಾಯಾಧೀಶರಾದ ನೂರುನ್ನೀಸಾ, ಮಹಿಳಾ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಮಕ್ಕಳ ರಕ್ಷಣಾಧಿಕಾರಿ ಆರ್.ಜಿ.ಪವಿತ್ರ, ಸಬ್‌ಇನ್ಸ್‌ಪೆಕ್ಟರ್ ಸರಸ್ವತಿ ಇತರರು ಇದ್ದರು
ತುಮಕೂರಿನಲ್ಲಿ ಶುಕ್ರವಾರ ಬಾಲ್ಯ ವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಯುವ ಮೇಳವನ್ನು ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ನ್ಯಾಯಾಧೀಶರಾದ ನೂರುನ್ನೀಸಾ, ಮಹಿಳಾ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಮಕ್ಕಳ ರಕ್ಷಣಾಧಿಕಾರಿ ಆರ್.ಜಿ.ಪವಿತ್ರ, ಸಬ್‌ಇನ್ಸ್‌ಪೆಕ್ಟರ್ ಸರಸ್ವತಿ ಇತರರು ಇದ್ದರು   

ತುಮಕೂರು: ಬಾಲ್ಯ ವಿವಾಹ ಈ ಸಮಾಜದ ಅನಿಷ್ಟ ಪದ್ಧತಿ. ಅದನ್ನು ತೊಲಗಿಸಲು ಎಲ್ಲೆಡೆ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ಪ್ರತಿಪಾದಿಸಿದರು.

ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ಶುಕ್ರವಾರ ಬಾಲ್ಯ ವಿವಾಹ ನಿಷೇಧದ ಬಗ್ಗೆ ಯುವ ಜನರಿಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒತ್ತಡಕ್ಕೆ ಸಿಲುಕಿ 18 ವರ್ಷಕ್ಕೆ ಮೊದಲೇ ಹೆಣ್ಣು ಮಕ್ಕಳಿಗೆ ವಿವಾಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮದುವೆ ನಂತರ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ADVERTISEMENT

ಬಾಲ್ಯ ವಿವಾಹ ತಡೆಗೆ ಕಾನೂನು ಜಾರಿಯಲ್ಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಅರಿವು ಮೂಡಿಸಬೇಕಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಡೆಯುವ ಬಗ್ಗೆ ಮಾಹಿತಿ ಸಿಕ್ಕರೆ ತಕ್ಷಣ ಯಾರಿಗೂ ಅಂಜದೆ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ‘ಜಿಲ್ಲೆಯ ಅಂಕಿ-ಅಂಶಗಳನ್ನು ಗಮನಿಸಿದರೆ ಗ್ರಾಮಾಂತರ ಪ್ರದೇಶದಲ್ಲಿ ಕುಟುಂಬದ ಸಂಬಂಧ, ಆಸ್ತಿ ಉಳಿಸಿಕೊಳ್ಳುವ ಸಲುವಾಗಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿವೆ. ಬುಡಕಟ್ಟು ಜನಾಂಗದ ಕುಟುಂಬಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಈ ಬಗ್ಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಮಹಿಳಾ ಮತ್ತು ಮಕ್ಕಳ ಅಧಿಕಾರಿ ಆರ್.ಜಿ.ಪವಿತ್ರ, ಇಲಾಖೆ ನಿರೂಪಣಾಧಿಕಾರಿ ಓಂಕಾರಪ್ಪ, ನಗರ ಮಹಿಳಾ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷೆ ಅಂಜಲಿ ರಾಮಣ್ಣ, ವರದಕ್ಷಿಣೆ ವಿರೋಧಿ ಮಹಿಳಾ ಸಾಂತ್ವನ ಕೇಂದ್ರದ ಕಾರ್ಯದರ್ಶಿ ಸಾ.ಚಿ.ರಾಜ್‍ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.