ತುಮಕೂರು: ನಗರದಲ್ಲಿ ಜ. 29ರಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಬಸ್‌ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳ ಸಂಚಾರ ತೀರ ಕಡಿಮೆ ಪ್ರಮಾಣದಲ್ಲಿ ಇರಲಿದೆ.
ಪ್ರಾಥಮಿಕ ಹಂತದ ಮಾಹಿತಿ ಪ್ರಕಾರ 405 ಕೆಎಸ್‌ಆರ್‌ಟಿಸಿ ಬಸ್ ಹಾಗೂ 220 ಖಾಸಗಿ ಬಸ್‌ಗಳು ಸೇರಿದಂತೆ ಒಟ್ಟು 625 ಬಸ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಭಾನುವಾರ ಸಂಜೆ ವೇಳೆಗೆ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಅಂದರೆ ಸುಮಾರು 650 ಬಸ್‌ಗಳು ಸೋಮವಾರ ರಸ್ತೆಗೆ ಇಳಿಯುವುದಿಲ್ಲ.
ಜಿಲ್ಲೆಯ ಎಲ್ಲಾ ಕೆಎಸ್‌ಆರ್‌ಟಿಸಿ ಡಿಪೊಗಳಲ್ಲಿ ಒಟ್ಟು 640 ಬಸ್‌ಗಳಿವೆ. ಅದರಲ್ಲಿ 400ಕ್ಕೂ ಹೆಚ್ಚು ಬಸ್‌ಗಳನ್ನು ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಂಡರೆ ಇನ್ನೂ ಉಳಿಯುವುದು 200 ಬಸ್‌ಗಳಷ್ಟೇ. ಜಿಲ್ಲೆಗೆ ಹೊಂದಿಕೊಂಡಿರುವ, ಅಕ್ಕಪಕ್ಕದ ಡಿಪೊಗಳಿಂದ ಸುಮಾರು 100 ಬಸ್‌ಗಳನ್ನು ಪಡೆದುಕೊಂಡರೂ ಜಿಲ್ಲೆಯಲ್ಲಿ ಅರ್ಧದಷ್ಟು ಬಸ್‌ಗಳ ಕೊರತೆ ಎದುರಾಗಲಿದೆ. ಖಾಸಗಿ ಬಸ್‌ಗಳನ್ನೂ ಬಳಕೆ ಮಾಡುತ್ತಿದ್ದು, ಪ್ರಯಾಣಿಕರು ತೀವ್ರ ಸಮಸ್ಯೆಗೆ ಸಿಲುಕಲಿದ್ದಾರೆ.
ಬೆಂಗಳೂರು– ತುಮಕೂರು ನಡುವೆ ಸಂಚರಿಸುವ ಬಸ್‌ಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿತ ಮಾಡುವ ಸಾಧ್ಯತೆಗಳಿವೆ. ಗ್ರಾಮೀಣ ಭಾಗ ಹಾಗೂ ಇತರೆಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಖಾಸಗಿ ಬಸ್‌ಗಳನ್ನು ಬಳಕೆ ಮಾಡುತ್ತಿರುವುದರಿಂದ ಗ್ರಾಮೀಣ ಭಾಗದ ಜನರು ತೀವ್ರ ಪರದಾಟ ಅನುಭವಿಸಬೇಕಾಗುತ್ತದೆ. ಜಿಲ್ಲೆಯಲ್ಲಿ ಇಂದಿಗೂ ಹೆದ್ದಾರಿಗಳು, ಪ್ರಮುಖ ಮಾರ್ಗಗಳಲ್ಲಿ ಮಾತ್ರ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಖಾಸಗಿ ಬಸ್‌ಗಳನ್ನೇ ಜನರು ಅವಲಂಬಿಸಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬಸ್‌ಗಳನ್ನು ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಂಡರೆ ಸಾರ್ವಜನಿಕರ ನಿತ್ಯದ ಪ್ರಯಾಣದ ಮೇಲೆ ಪರಿಣಾಮ ಬೀರಲಿದೆ.
‘ಶಕ್ತಿ’ ಯೋಜನೆ ಜಾರಿ ನಂತರ ಬಸ್‌ಗಳು ಜನರಿಂದ ತುಂಬಿ ತುಳುಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹಚ್ಚಾಗಿದ್ದರೂ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿಲ್ಲ. ಸಾಕಷ್ಟು ಕಡೆಗಳಲ್ಲಿ ಬಸ್‌ಗಳಲ್ಲಿ ಸ್ಥಳಾವಕಾಶ ಸಿಗದೆ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳುವುದು ಕಷ್ಟಕರವಾಗಿದೆ. ಬಸ್‌ಗಾಗಿ ನಿತ್ಯ ಒಂದಲ್ಲೊಂದು ಕಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
‘ಜಿಲ್ಲಾ ಆಡಳಿತ ಕೇಳಿದಷ್ಟು ಬಸ್‌ಗಳನ್ನು ಕೊಡಲಾಗುತ್ತದೆ. ನಮ್ಮ ಜಿಲ್ಲೆಯಷ್ಟೇ ಅಲ್ಲದೆ, ಅಕ್ಕಪಕ್ಕದ ಜಿಲ್ಲೆ, ಸಮೀಪದ ಡಿಪೊಗಳಿಂದ ಬಸ್‌ಗಳನ್ನು ತರಿಸಿಕೊಳ್ಳಲಾಗುತ್ತದೆ. ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ತಿಳಿಸಿದರು.
ಕೆಎಸ್‌ಆರ್‌ಟಿಸಿ 405, ಖಾಸಗಿ 220 ಬಸ್‌ಗಳ ಬಳಕೆ ಬಹುತೇಕ ಕಡೆಗಳಲ್ಲಿ ಸೋಮವಾರ ಬಸ್ ಸಂಚಾರ ಸ್ಥಗಿತ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆ
ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ದಿನ ನಿತ್ಯ ಸಂಚರಿಸುವ ರೂಟ್‌ಗಳಲ್ಲಿ ಬಸ್‌ಗಳ ಸಂಖ್ಯೆ ಕಡಿತ ಮಾಡದಂತೆ ಸೂಚಿಸಲಾಗಿದೆ.ಶುಭ ಕಲ್ಯಾಣ್ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.