ಗುಬ್ಬಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ನಬಾರ್ಡ್ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲವನ್ನು ಕಡಿತಗೊಳಿಸಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು ದೂರಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿಯನ್ನು ವಿರೋಧಿಸಿ ಹಾಗೂ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಆಗ್ರಹಿಸಿ ಜನವರಿ 29ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ತಾಲ್ಲೂಕಿನಿಂದ 800ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸರ್ಕಾರವು ನಬಾರ್ಡ್‌ಗೆ ಹೆಚ್ಚು ಅನುದಾನ ನೀಡುವ ಮೂಲಕ ರೈತರ ಸಂಕಷ್ಟ ಪರಿಹರಿಸಲು ನಿಲ್ಲಬೇಕಿದೆ. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇತ್ತೀಚೆಗೆ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದ ಜನರಿಂದ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಶೋಷಣೆ ಮಾಡಲಾಗುತ್ತಿದೆ. ಮೈಕ್ರೊ ಫೈನಾನ್ಸ್ ಕಿರುಕುಳ ತಾಳಲಾರದೆ ಗ್ರಾಮೀಣ ಭಾಗದಲ್ಲಿ ಆತ್ಮಹತ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ಮಧ್ಯೆ ಪ್ರವೇಶಿಸಿ ಇವುಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.
ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ಕೆಜಿಗೆ ಕೇವಲ ₹1 ಹೆಚ್ಚಳ ಮಾಡುವ ಮೂಲಕ ರೈತರಿಗೆ ಅವಮಾನ ಮಾಡಿರುವ ಕೇಂದ್ರ ಸರ್ಕಾರವು ಶೀಘ್ರ ಮರುಪರಿಶೀಲಿಸಿ ವೈಜ್ಞಾನಿಕ ಬೆಲೆ ನೀಡಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ರೈತರ ಮೇಲೆ ಪ್ರಹಾರ ನಡೆಸುತ್ತಿರುವುದು ದುರಾದೃಷ್ಟಕರ. ಕೃಷಿಯಲ್ಲಿ ಆದಾಯಕ್ಕಿಂತ ವೆಚ್ಚವೇ ಅಧಿಕವಾಗುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದರು.
ತಾಲೂಕಿನಲ್ಲಿ ಅಭಿವೃದ್ಧಿ ಯೋಜನೆಗಳು ಕುಂಠಿತಗೊಂಡಿದ್ದು, ಮಂದಗತಿಯಲ್ಲಿ ಸಾಗುತ್ತಿರುವ ಕುಡಿಯುವ ನೀರಿನ ಯೋಜನೆಗಳನ್ನು ಸಂಬಂಧಿಸಿದ ಅಧಿಕಾರಿಗಳು ತುರ್ತಾಗಿ ಮುಗಿಸುವತ್ತ ಆದ್ಯತೆ ನೀಡಬೇಕು ಎಂದರು.
ಗೋಷ್ಠಿಯಲ್ಲಿ ತಾಲ್ಲೂಕು ಘಟಕದ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ್, ಪದಾಧಿಕಾರಿಗಳಾದ ಯತೀಶ್, ಚನ್ನಬಸವಣ್ಣ, ಬಸವರಾಜು, ಮಹದೇವಣ್ಣ, ಕೃಷ್ಣಜೆಟ್ಟಿ, ಕುಮಾರ್, ರವೀಶ್ ಹಾಗೂ ರೈತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.