ADVERTISEMENT

ತುಮಕೂರು: ನ. 16ಕ್ಕೆ ಕಾಂಗ್ರೆಸ್ ಸಮಾವೇಶ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 8:29 IST
Last Updated 14 ನವೆಂಬರ್ 2021, 8:29 IST

ತುಮಕೂರು: ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನ. 16ರಂದು ನಡೆಯುವ ಸಮಾವೇಶದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಅಬ್ದುಲ್ ಜಬ್ಬಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮುದಾಫೀರ್ ಅಹಮದ್ ಖಾನ್ ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಅರಮನೆ ಮೈದಾನದ ನಲಪಾಡ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪಗಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ. ಪರಮೇಶ್ವರ ಸೇರಿದಂತೆ ಎಲ್ಲಾ ಮುಖಂಡರು, ಎಲ್ಲಾ ಜಿಲ್ಲೆಗಳ ಅಲ್ಪಸಂಖ್ಯಾತರ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ADVERTISEMENT

ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ, ಅವಕಾಶಗಳು, ಅಧಿಕಾರದೊರೆತಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಇದಕ್ಕೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನರು ನೀಡಿದಮತಗಳೇ ಸಾಕ್ಷಿ ಎಂದರು.

ಸಿ.ಎಂ. ಇಬ್ರಾಹಿಂ ಯಾವ ಉದ್ದೇಶಕ್ಕೆ ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಎಲ್ಲಾ ಸಂದರ್ಭಗಳಲ್ಲೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತರೆ, ಅವರ ಕೋರಿಕೆ ಈಡೇರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹಮದ್, ‘ತುಮಕೂರಿನಲ್ಲಿ ಅಲ್ಪಸಂಖ್ಯಾತರ ಘಟಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯಿಂದ ಎರಡು ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಡಾ.ಮೆಹಮೂದ್, ಇಕ್ಬಾಲ್ ಅಹಮದ್, ಮುಜೀಬ್, ಖಲೀಂ ಅಹಮದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.