
ತುಮಕೂರಿನಲ್ಲಿ ಶನಿವಾರ ಜಿಲ್ಲಾ ಆಡಳಿತದಿಂದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ
ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ನಗರದ ವಿವಿಧೆಡೆ ಶನಿವಾರ ಹಲವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಲಾ–ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ವಿಚಾರಧಾರೆ, ಅವರ ಬದುಕಿನ ಹಾದಿ ಸ್ಮರಿಸಲಾಯಿತು.
ಮಹಾನಗರ ಪಾಲಿಕೆ ಕಚೇರಿ ಆವರಣದ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಪುತ್ಥಳಿ ಬಳಿ ಜಿಲ್ಲಾ ಆಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಅಂಬೇಡ್ಕರ್ ರಚಿಸಿದ ಸಂವಿಧಾನವೇ ದೇಶದ ಪ್ರಜಾಪ್ರಭುತ್ವದ ಅಡಿಪಾಯ. ವಿವಿಧತೆಯಲ್ಲಿ ಏಕತೆ ಉಳಿಸಿ, ರಾಷ್ಟ್ರವನ್ನು ಸುಭದ್ರವಾಗಿರಿಸಿದೆ. ಸಮಾಜದ ಪರಿವರ್ತನೆಗಾಗಿ ಅಂಬೇಡ್ಕರ್ ಹೆಸರಿನಲ್ಲಿ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ’ ಎಂದು ಹೇಳಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಯೋಗಾನಂದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ದಲಿತ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಸಂವಿಧಾನ ರಕ್ಷಣಾ ಕವಚ: ಸಂವಿಧಾನವು ನಮಗೆ ಒಂದು ರಕ್ಷಣಾ ಕವಚವಿದ್ದಂತೆ. ಸಂವಿಧಾನ ಒಂದು ದೊಡ್ಡ ಶಕ್ತಿ. ನಮ್ಮ ಹಕ್ಕು, ಸಮಾನತೆ ಕುರಿತು ತಿಳಿದುಕೊಳ್ಳಬೇಕು. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಸ್ಫೂರ್ತಿಯ ದಿನವೆಂದು ಭಾವಿಸಬೇಕು ಎಂದು ವಿಶ್ವವಿದ್ಯಾಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಸಲಹೆ ಮಾಡಿದರು.
ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಫಿಯ ಕಾನೂನು ಕಾಲೇಜಿನ ಪ್ರಾಂಶುಪಾಲ ಎಸ್.ರಮೇಶ್, ‘ರಾಜಕೀಯ ಸ್ವಾತಂತ್ರ್ಯ ಬಯಸುವ ಮೊದಲು ಸಾಮಾಜಿಕ ಸ್ವಾತಂತ್ರ್ಯ ಪಡೆಯಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿರುವುದಿಲ್ಲ. ಸಂವಿಧಾನ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆಯ ತತ್ವ ಹೊಂದಿದೆ. ದೇಶದಲ್ಲಿ ಅಸಮಾನತೆ ಹೆಚ್ಚಾದರೆ ಪ್ರಗತಿ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.
ಅಧ್ಯಯನ ಕೇಂದ್ರದ ನಿರ್ದೇಶಕ ಕೇಶವ, ಕಲಾ ಕಾಲೇಜಿನ ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.