ADVERTISEMENT

ತುಮಕೂರು | ಮತ್ತೆ ನಾಲ್ಕು ಮಂದಿಗೆ ಕೊರೊನಾ

ಮುಂಬೈನಿಂದ ಬಂದವರಿಗೆ ಸೋಂಕು; ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 8

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:39 IST
Last Updated 20 ಮೇ 2020, 14:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಮುಂಬೈನಿಂದ ಬಂದ ನಾಲ್ಕು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ, ಜಿಲ್ಲೆಯ ಜನರ ಆತಂಕ ದೂರವಾಗುತ್ತಿದೆ ಎಂಬಂತಹ ಸಮಯದಲ್ಲೇ ಮತ್ತೆ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರಟಗೆರೆ ಮತ್ತು ತುರುವೇಕೆರೆ ತಾಲ್ಲೂಕಿನ ಎರಡು ಕುಟುಂಬಗಳು ಮುಂಬೈನಲ್ಲಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದವು. ಅಲ್ಲಿ ಕೊರೊನಾ ಸೋಂಕು ಹೆಚ್ಚಿದಂತೆ ಈ ಕುಟುಂಬಗಳ ಆರು ಮಂದಿ ಮುಂಬೈನಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದಾರೆ.

ADVERTISEMENT

ಉಜ್ಜಿನಕುಂಟೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆಗೆ ಒಳಪಡಿಸಿದ ನಂತರ ಇವರನ್ನು ಶಿರಾ ಹೊರವಲಯದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಗಂಟಲು ಸ್ರಾವ ಮತ್ತು ಕಫದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

30 ವರ್ಷದ ಇಬ್ಬರು ಮಹಿಳೆಯರು ಹಾಗೂ 10ರಿಂದ 12 ವರ್ಷದೊಳಗಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಉಳಿದ ಇಬ್ಬರ ಮಾದರಿಗಳು ನೆಗೆಟಿವ್ ಬಂದಿವೆ. ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 15 ಪ್ರಕರಣಗಳು ದಾಖಲಾಗಿವೆ. 8 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದ್ದಾರೆ.

ಇವರು ಜಿಲ್ಲೆಗೆ ಬಂದ ತಕ್ಷಣ ಕ್ವಾರಂಟೈನ್ ಮಾಡಿದ್ದರಿಂದ ಯಾವುದೇ ಪ್ರಾಥಮಿಕ ಸಂಪರ್ಕ ಇಲ್ಲ. ಆದರೆ ಪ್ರಯಾಣದ ಸಮಯದಲ್ಲಿ ಯಾರ ಜತೆಯಲ್ಲಾದರೂ ಸಂಪರ್ಕದಲ್ಲಿ ಇದ್ದರೆ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅಂತರರಾಜ್ಯದಿಂದ ಜಿಲ್ಲೆಗೆ ಬರುವವರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಸಾರ್ವಜನಿಕರು ಹೊರ ರಾಜ್ಯದಿಂದ ಬಂದವರ ಮಾಹಿತಿಯನ್ನು ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತಕ್ಕೆ ನೀಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.