ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಭ್ರಷ್ಟಾಚಾರ: ನಳಿನ್ ಕುಮಾರ್ ಕಟೀಲ್ ಆರೋಪ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 16:48 IST
Last Updated 23 ಜುಲೈ 2020, 16:48 IST
ಶಿರಾದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದರು. ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್ ಹಾಜರಿದ್ದರು
ಶಿರಾದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದರು. ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್ ಹಾಜರಿದ್ದರು   

ಶಿರಾ: ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿತ್ತು. ವಸತಿ ಯೋಜನೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭ್ರಷ್ಟಾಚಾರ ನಡೆಸಿದ ಗುಂಗಿನಲ್ಲಿರುವ ಸಿದ್ದರಾಮಯ್ಯ ಈಗ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಭ್ರಮೆಯಲ್ಲಿದ್ದಾರೆ. ಕಾಮಾಲೆ ಕಣ್ಣಿನವರಿಗೆ ಲೋಕವೆಲ್ಲಾ ಹಳದಿಯಾಗಿ ಕಾಣುತ್ತದೆ. ಅವರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಒಂದು ವೇಳೆ ಅವ್ಯವಹಾರ ನಡೆದಿದ್ದರೆ ಸದನದಲ್ಲಿ ಚರ್ಚೆ ನಡೆಸಲಿ’ ಎಂದರು.

ಕೊರೊನಾ ನಿಯಂತ್ರಣಕ್ಕೆ ಕಾಂಗ್ರೆಸ್ ಸಹಕಾರ ನೀಡದೆ ಭ್ರಷ್ಟಾಚಾರದ ಹೆಸರಿನಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ದೂರಿದರು.

ADVERTISEMENT

ಸಂಘಟನೆಗೆ ಒತ್ತು: ನಮ್ಮಲ್ಲಿ ಪಕ್ಷಕ್ಕಿಂತ ಯಾರು ದೊಡ್ಡವರಿಲ್ಲ. ರಾಜ್ಯಸಭೆ ಮತ್ತು ವಿಧಾನ ಪರಿಷತ್ತು ಟಿಕೇಟ್ ನೀಡುವ ಸಮಯದಲ್ಲಿ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡಿದೆ. ಇದು ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ. ಮುಂದಿನ ದಿನಗಳಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಮಾಲಿ ಮರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.