ADVERTISEMENT

ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ: ನಿಖಿಲ್ ಕುಮಾರಸ್ವಾಮಿ

‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 6:09 IST
Last Updated 19 ಜೂನ್ 2025, 6:09 IST
ಮಧುಗಿರಿಯಲ್ಲಿ ನಡೆದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು
ಮಧುಗಿರಿಯಲ್ಲಿ ನಡೆದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು   

ಮಧುಗಿರಿ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲ್ಲೂಕು ಜೆಡಿಎಸ್ ಬುಧವಾರ ಆಯೋಜಿಸಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರಾಜ್ಯದ ಜನ ರೋಸಿ ಹೋಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯ ಆಡಳಿತವನ್ನು ಜನರು ಮೆಚ್ಚಿದ್ದಾರೆ. ಮುಂಬರುವ ದಿನಗಳಲ್ಲಿ ಗ್ರಾ.ಪಂ.ಮಟ್ಟದಲ್ಲಿ ಜೆಡಿಎಸ್ ಬಲವರ್ಧನೆ ಮಾಡಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಜನರ ಮನೆ- ಮನೆಗೆ ತೆರಳಿ ಸಾಧನೆಗಳನ್ನು ಜನರಿಗೆ ತಿಳಿಬೇಕು ಎಂದರು.

ADVERTISEMENT

ಮಂಡ್ಯ, ರಾಮನಗರ ಹಾಗೂ ಚನ್ನಪಟ್ಟಣ ಚುನಾವಣೆಯಲ್ಲಿ ನನ್ನನ್ನು ಮೋಸ ಮಾಡಿ ಹಾಗೂ ಜನರಿಗೆ ಸುಳ್ಳು ಹೇಳಿ ಸೋಲಿಸಿದರು. ಆದರೂ ಜನರ ಮಧ್ಯೆ ಇದ್ದುಕೊಂಡು ಪ್ರೀತಿ ಮತ್ತು ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇನೆ ಎಂದರು.

ಮಧುಗಿರಿಯಲ್ಲಿ ಎರಡು ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತರನ್ನು ಕೇಳುವವರೆ ಇಲ್ಲದಂತಾಗಿದೆ ಎಂದು ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಬಳಿ ಅಳಲು ತೋಡಿಕೊಂಡರು.

ಶೀಘ್ರ ಮಾಜಿ ಶಾಸಕ ಎಂ.ವಿ.ವೀರಭದ್ರಯ್ಯ ಅವರೊಂದಿಗೆ ಮಾತನಾಡಿ ಈ ಸಮಸ್ಯೆ ಬಗೆಹರಿಸಲಾಗುವುದು ಎಂದು ನಿಖಿಲ್‌ ಭರವಸೆ ನೀಡಿದರು.

ಮಾಜಿ ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ತಾಲ್ಲೂಕಿನಲ್ಲಿ ಗ್ರಾ.ಪಂ.ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಹೆಚ್ಚು ಹೆಚ್ಚು ಜನರು ಜೆಡಿಎಸ್ ಪಕ್ಷದ ಸದಸ್ಯರಾಗಬೇಕೆಂದು ತಿಳಿಸಿದರು.

ಮಾಜಿ ಶಾಸಕ ತಿಮ್ಮರಾಯ್ಯಪ್ಪ, ವಿಧಾ‌ನ ಪರಿಷತ್ ಸದಸ್ಯ ತಿಪೇಸ್ವಾಮಿ, ಪುರಸಭೆ ಸದಸ್ಯರಾದ ಎಂ.ಎಸ್. ಚಂದ್ರಶೇಖರ್ ಬಾಬು, ಎಂ.ಎಲ್.ಗಂಗರಾಜು, ಕೆ.ನಾರಾಯಣ್, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಜಿ.ಪಂ.ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಸವರಾಜು ಹಾಜರಿದ್ದರು.

ಜೆಡಿಎಸ್ ಅಧಿಕಾರಕ್ಕೆ ತಂದು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಜನರು ರೋಸಿ ಹೋಗಿದ್ದಾರೆ.
ಎಂ.ವಿ.ವೀರಭದ್ರಯ್ಯ ಮಾಜಿ ಶಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.