ಶಿರಾ: ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ್ದಾರೆ. ಅದು ಉಳಿದರೆ ಮಾತ್ರ ದೇಶದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಲು ಸಾಧ್ಯ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನ ಗಮನಿಸಿದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ ಎನ್ನುವ ಅನುಮಾನ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವ ಮತ್ತಷ್ಟು ಸದೃಢಗೊಳಿಸಲು ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.
ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವ ಉಳಿವಿಗಾಗಿ ನಾವು ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎನ್ನುವ ಸಂದೇಶ ಕಳುಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸಂಘ–ಸಂಸ್ಥೆಗಳು, ಹೋರಾಟಗಾರರು, ಪ್ರಗತಿಪರರು, ರೈತರು ಮತ್ತು ಸಾರ್ವಜನಿಕರ ಪಾಲುದಾರಿಕೆ ಹಾಗೂ ಸಹಭಾಗಿತ್ವ ಅತ್ಯವಶ್ಯ. ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗಾಗಿ ರೂಪುರೇಷೆ ಸಿದ್ದಪಡಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಸಚ್ಚಿದಾನಂದ ಕುಚನೂರು, ತಾ.ಪಂ ಇ.ಒ ಹರೀಶ್, ಡಿವೈಎಸ್‌ಪಿ ಶೇಖರ್, ಬಿಇಒ ಕೃಷ್ಣಪ್ಪ, ಕೃಷಿ ಸಹಾಯಕ ನಿರ್ದೇಶಕ ನಾಗರಾಜು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುಧಾಕರ್, ವಲಯ ಅರಣ್ಯಾಧಿಕಾರಿ ನವನೀತ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಮಚಂದ್ರಪ್ಪ, ಬೆಸ್ಕಾಂ ಎಇಇ ಶಾಂತರಾಜು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.