ADVERTISEMENT

ಕೊರೊನಾದಿಂದ ವ್ಯಕ್ತಿ ಸಾವು; ಐವರಿಗೆ ಸೋಂಕು

ಜಿಲ್ಲೆಯಲ್ಲಿ 57ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ, ಈವರೆಗೆ 3 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 15:40 IST
Last Updated 23 ಜೂನ್ 2020, 15:40 IST

ತುಮಕೂರು: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌–19ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಾವು ಹಾಗೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಜನರ ಆತಂಕವನ್ನು ಹೆಚ್ಚಿಸಿದೆ.

ನಗರದ ಪಿ.ಎಚ್‌.ಕಾಲೊನಿ ನಿವಾಸಿ 56 ವರ್ಷದ ವ್ಯಕ್ತಿ ಮೃತರು. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಂತಾಗಿದೆ.

ಇವರು ಉಸಿರಾಟದ ತೊಂದರೆಯಿಂದಾಗಿ ಜಿಲ್ಲಾ ಆಸ್ಪತ್ರೆಗೆ ಜೂನ್ 22ರಂದು ದಾಖಲಾಗಿದ್ದರು. ಡಯಾಬಿಟಿಸ್‌, ರಕ್ತದ ಒತ್ತಡ, ಉಸಿರಾಟದ ತೊಂದರೆಯಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ADVERTISEMENT

ಇವರ ಗಂಟಲು ದ್ರವ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಬಂದಿದ್ದು, ಕೋವಿಡ್‌–19 ಇರುವುದು ದೃಢಪಟ್ಟಿದೆ. ಸರ್ಕಾರದ ಮಾರ್ಗಸೂಚಿಯಂತೆ ಮಹಾನಗರ ಪಾಲಿಕೆಯಿಂದ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೃತ ವ್ಯಕ್ತಿಯು ತುಮಕೂರು, ಮಧುಗಿರಿ, ಬೆಂಗಳೂರು ಶಿವಾಜಿನಗರದ ಸಂಪರ್ಕ ಹೊಂದಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಲಾಗುತ್ತಿದೆ. ವಾಸವಾಗಿದ್ದ ಪಿ.ಎಚ್‌.ಕಾಲೊನಿಯನ್ನು ನಿರ್ಬಂಧಿತ ವಲಯವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಮಧುಗಿರಿ ತಾಲ್ಲೂಕಿನಲ್ಲಿ ಇಬ್ಬರಿಗೆ ಕೋವಿಡ್–19 ಧೃಡಪಟ್ಟಿದೆ. 31 ವರ್ಷದ ಎಲ್ಐಸಿ ಅಧಿಕಾರಿ ಮಹಾರಾಷ್ಟ್ರದ ಪುಣೆಯಿಂದ ಜೂನ್ 21ರಂದು ಬಂದಿದ್ದರು. ಇವರನ್ನು ವಸತಿ ಗೃಹದಲ್ಲಿ ಕ್ವಾರಂಟೈನ್ ಮಾಡಿ ಗಂಟಲು ದ್ರವವನ್ನು ಪರೀಕ್ಷೆ ಕಳುಹಿಸಲಾಗಿತ್ತು. ಮಂಗಳವಾರ ಬಂದ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕಕ್ಕೆ ಬಂದ ನಾಲ್ಕು ಮಂದಿ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ ನಾಲ್ಕು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.

ಮಧುಗಿರಿ ತಾಲ್ಲೂಕು ಅಚ್ಚೇನಹಳ್ಳಿಯ 29 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಬೆಂಗಳೂರಿಗೆ ಹೋಗಿ ಬಂದಿದ್ದ ಇವರು ಜ್ವರ, ನೆಗಡಿ ಹಿನ್ನೆಲೆಯಲ್ಲಿ ಜೂನ್ 21ರಂದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು. ಆಗ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ಸೋಂಕು ಇರುವುದು ದೃಢಪಟ್ಟಿದೆ. ಇವರ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕಕ್ಕೆ ಬಂದ 40 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯ 21 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಇವರು ಜೂನ್ 18ರಂದು ಬೆಂಗಳೂರು ಗ್ರಾಮಾಂತರ ನೆಲಮಂಗಲದಿಂದ ಬಂದಿದ್ದರು. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದ 18 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಲಾಗುತ್ತಿದೆ.

ಕೊರಟಗೆರೆಯಲ್ಲಿ ಮೊದಲ ಪ್ರಕರಣ

ಕೊರಟಗೆರೆ ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಕೊವಿಡ್-19 ದೃಢಪಟ್ಟಿದೆ.

ತಾಲ್ಲೂಕಿನ 26 ವರ್ಷದ ಮಹಿಳೆ ಮೂಲತಃ ತುಮಕೂರು ತಾಲ್ಲೂಕಿನ ಜಕ್ಕೇನಹಳ್ಳಿ ವಾಸಿಯಾಗಿದ್ದು, ಕತ್ತಿನಾಗೇನಹಳ್ಳಿಗೆ ಮದುವೆ ಮಾಡಿಕೊಡಲಾಗಿತ್ತು. ಅನಾರೋಗ್ಯದ ಕಾರಣಕ್ಕಾಗಿ ಜೂನ್ 20ರಂದು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದಾಗ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ. ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದ 58 ಮಂದಿ, ದ್ವಿತೀಯ ಸಂಪರ್ಕಕ್ಕೆ ಬಂದ 100 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಪ್ರಯಾಣದ ಮಾಹಿತಿ ಪತ್ತೆ ಹಚ್ಚಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.