ADVERTISEMENT

ಕೋವಿಡ್-19 ಭೀತಿ: ತುಮಕೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ; ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಿದ್ದ 12 ಮಾದರಿಗಳು ನೆಗೆಟಿವ್

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 14:33 IST
Last Updated 20 ಮಾರ್ಚ್ 2020, 14:33 IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಕೊರೊನಾ ಮುಂಜಾಗ್ರತಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ-2 ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಇದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಕೊರೊನಾ ಮುಂಜಾಗ್ರತಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ-2 ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಇದ್ದರು.   

ತುಮಕೂರು: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 31ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇವೆ. ಹೆಚ್ಚಿನ ಜನಸಂದಣಿ ಒಂದೆಡೆ ಸೇರಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆ ಆಗಬಹುದು. ಪ್ರಾಣಹಾನಿಯಾಗುವ ಸಂಭವವಿದೆ. ಇದನ್ನು ಮನಗಂಡು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

12 ಮಾದರಿಗಳು ನೆಗೆಟಿವ್: ಜಿಲ್ಲೆಗೆ ವಿವಿಧ ದೇಶಗಳಿಂದ ಬಂದಿರುವ 256 ಜನರನ್ನು ತಪಾಸಣೆಗೊಳಪಡಿಸಲಾಗಿದೆ. 12 ಮಂದಿಯ ಗಂಟಲು ಸ್ರಾವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಎಲ್ಲವೂ ನೆಗೆಟಿವ್ ಬಂದಿದೆ ಎಂದು ತಿಳಿಸಿದರು.

ಸೋಂಕು ಪ್ರಕರಣಗಳು ದೃಢಪಟ್ಟಿಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಪಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಜನರಿಂದ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆಯಲ್ಲಿ ಮಾರ್ಚ್ 22ರಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಜನತಾ ಕರ್ಪ್ಯೂ ಜಾರಿಯಲ್ಲಿರುತ್ತದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್, ಸಾರಿಗೆ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂಗಡಿ, ಹೋಟೆಲ್, ಮತ್ತಿತರ ವಾಣಿಜ್ಯ ಚಟುವಟಿಕೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿರುವ ಬಿಸಿಎಂ ಸೇರಿದಂತೆ ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ 561ಕ್ಕೂ ಹೆಚ್ಚು ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಮನೆಗಳಲ್ಲಿ ನಿಗಾದಲ್ಲಿರುವವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ ಎಂದರು.

ಸಿಬ್ಬಂದಿಗೆ ಮಾಸ್ಕ್: ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ಶುಕ್ರವಾರ ಮಾಸ್ಕ್‌ಗಳನ್ನು ವಿತರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ದ್ವಾರದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿ ಥರ್ಮಲ್ ಸ್ಕ್ಯಾನರ್ ಮೂಲಕ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸುತ್ತಿದ್ದರು. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಯಿತು.

ನಿರ್ಬಂಧ: ಆರೋಗ್ಯದ ಹಿತದೃಷ್ಟಿಯಿಂದ ತುಮಕೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಅನವಶ್ಯ ಭೇಟಿ ನಿರ್ಬಂಧಿಸಲಾಗಿದೆ.ಪಾಲಿಕೆಗೆ ಒಳಪಡುವ ತುರ್ತು ಸೇವೆ (ನೀರು ಮತ್ತು ಸ್ವಚ್ಛತೆ) ಪಡೆಯಲು ಸಹಾಯವಾಣಿ ಸಂಪರ್ಕಿಸಬಹುದು. ಯಾವುದೇ ವ್ಯಕ್ತಿಯು ಕೆಮ್ಮು, ನೆಗಡಿ, ಜ್ವರ ಇತ್ಯಾದಿಗಳಿಂದ ಬಳಲುತ್ತಿದ್ದಲ್ಲಿ ಅಂತಹವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಗುಂಪಾಗಿ ಜನರು ಬರುವುದನ್ನು ನಿರ್ಬಂಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ.

ತುರ್ತು ಇದ್ದರೆ ಮುಂಜಾಗ್ರತಾ ಕ್ರಮವಾಗಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ಕಡ್ಡಾಯವಾಗಿ ಬಳಸಬೇಕು. ಸಾರ್ವಜನಿಕರು ತಮ್ಮ ಕೆಲಸ ಮುಗಿದ ನಂತರ ತುರ್ತಾಗಿ ಕಚೇರಿಯಿಂದ ನಿರ್ಗಮಿಸಬೇಕು. ಸಾರ್ವಜನಿಕರು ಪಾಲಿಕೆ ಕಚೇರಿಯೊಳಗೆ ಪ್ರವೇಶಿಸಲು ಸಂಜೆ 4 ರಿಂದ 5.30 ಗಂಟೆವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಂಧನ: ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾರದೋ ಹೆಸರು ಮತ್ತು ವಿಳಾದ ಸಮೂದಿಸಿ ಇವರಿಗೆ ಸೋಂಕು ಹರಡಿದೆ ಎಂದು ಸುದ್ದಿ ಹರಿಬಿಡುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವುದು ಸಹ ಶಿರ್ಕಾರ್ಹ. ಹೀಗೆ ಸುಳ್ಳು ಸುದ್ದಿ ಹಬ್ಬಿಸುವ ಕಿಡಿಗೇಡಿಗಳ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ವೈದ್ಯನಾಥೇಶ್ವರ ದೇಗುಲಕ್ಕೆ ನಿರ್ಬಂಧ

ತುಮಕೂರು ತಾಲ್ಲೂಕಿನ ಅರೆಯೂರು ವೈದ್ಯನಾಥೇಶ್ವರ ದೇವಾಲಯಕ್ಕೆ ಮಾ.31ರವರೆಗೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಐತಿಹಾಸಿಕ ವೈದ್ಯನಾಥೇಶ್ವರ ದೇವಾಲಯಕ್ಕೆ ವಿವಿಧ ಭಾಗಗಳಿಂದ ಭಕ್ತರು ಬರುತ್ತಿದ್ದರು.

ನಿಷೇಧಾಜ್ಞೆ ಉಲ್ಲಂಘಿಸಿದರೆ ಬಂಧನ

ನಿಷೇಧಾಜ್ಞೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶವು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದಲ್ಲಿ ಅಂತಹವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.