ತುಮಕೂರು: ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದಲ್ಲಿ ಭಾನುವಾರ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ, ಸರ್ವ ಸದಸ್ಯರ ಮಹಾಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ನಗರ ಕೇಂದ್ರಿತ ಸುದ್ದಿಗಳು ಹೆಚ್ಚಾಗಿವೆ. ಗ್ರಾಮೀಣ ಭಾಗದ ಸುದ್ದಿಗಳಿಗೆ ಆದ್ಯತೆ ನೀಡಬೇಕು. ರೈತರ ಬದುಕಿನ ಬಗ್ಗೆ ಬೆಳಕು ಚೆಲ್ಲುವ ಕೆಲಸವಾಗಬೇಕು. ಪ್ರಜಾಪ್ರಭುತ್ವ ರಕ್ಷಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಪತ್ರಕರ್ತರು ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು’ ಎಂದರು.
ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಪತ್ರಕರ್ತರು ಸಮಾಜಕ್ಕೆ ಸತ್ಯದ ಸಂಗತಿ ತಿಳಿಸಬೇಕು. ನಿಷ್ಠೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಅಭಿವೃದ್ಧಿ ಪತ್ರಿಕೋದ್ಯಮ ವೃತ್ತಿಯ ಆದ್ಯತೆಯಿಂದ ದೂರ ಸರಿದಿರುವುದು ಬೇಸರದ ಸಂಗತಿ. ಜನಮುಖಿ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಬಗ್ಗೆ ಚಿಂತಿಸಿ, ಕಾರ್ಯೋನ್ಮುಖರಾಗಬೇಕು. ಪತ್ರಕರ್ತರ ಎಲ್ಲ ಬೇಡಿಕೆಗಳನ್ನು ಸರ್ಕಾರ ಹಂತ ಹಂತವಾಗಿ ಈಡೇರಿಸುತ್ತಿದೆ’ ಎಂದು ತಿಳಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.