ಗುಬ್ಬಿ: ತಾಲ್ಲೂಕಿನ ಎಂಎನ್ ಕೋಟೆಯ ಸಮುದಾಯ ಆರೋಗ್ಯ ಕೇಂದ್ರ, ಸೋಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರ, ಹೂವಿನ ಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಮಂಚಲ ದೊರೆಯ ವ್ಯವಸಾಯ ಸೇವಾ ಸಹಕಾರ ಕೇಂದ್ರಕ್ಕೆ ಗುರುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.
ಎಂಎನ್ ಕೋಟೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಯಾವುದೇ ವೈದ್ಯರು ಇರುವುದಿಲ್ಲ. ಇದರಿಂದ ಗ್ರಾಮೀಣ ಭಾಗದಲ್ಲಿ ಜನರಿಗೆ ತುರ್ತು ಚಿಕಿತ್ಸೆ ಲಭ್ಯವಾಗದೆ ತೊಂದರೆ ಅನುಭವಿಸುವಂತಾಗಿದೆ. ಶೀಘ್ರ ಕ್ರಮ ಕೈಗೊಂಡು ರಾತ್ರಿ ಪಾಳಿಯಲ್ಲಿ ವೈದ್ಯರು ಕರ್ತವ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಂಡು ಅನುಕೂಲ ಮಾಡಿಕೊಡುವುದಾಗಿ ತಿಳಿಸಿದರು.
ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಬಂಧಿಸಿದ ಇಲಾಖೆಗಳ ಜೊತೆ ಸಹಕರಿಸಿ ರೋಗ ಹರಡದಂತೆ ತಡೆಯಬೇಕು. ಗ್ರಾಮೀಣ ಭಾಗದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯದ ಕೊರತೆಯಾಗದಂತೆ ವೈದ್ಯರು ಕ್ರಮವಹಿಸಬೇಕು. ಸಮಸ್ಯೆಗಳಿದ್ದಲ್ಲಿ ತಕ್ಷಣ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಹೂವಿನಕಟ್ಟೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಾಲೆ ಹಾಗೂ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದರು. ಸಮಸ್ಯೆಯಾದಲ್ಲಿ ಗಮನಕ್ಕೆ ತರುವಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಚಿಸಿದರು.
ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಬಿ.ಆರತಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.