ತುಮಕೂರು: ಖಾಲಿ ಇರುವ ಶಾಲಾ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಮನವಿ ಸಲ್ಲಿಸಿದರು.
ತಕ್ಷಣ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು; ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ಅತಿಥಿ ಶಿಕ್ಷಕರನ್ನು ನೇಮಿಸಬೇಕು; ವಿಷಯವಾರು, ತರಗತಿವಾರು ಶಿಕ್ಷಕರನ್ನು ನೇಮಕ ಮಾಡಬೇಕು. ಕನಿಷ್ಠ 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದ್ದು, ತಕ್ಷಣ ಕ್ರಿಯಾ ಯೋಜನೆ ರೂಪಿಸಿ, ಮುಂದಿನ ಮೂರು ತಿಂಗಳಲ್ಲಿ ಗುಣಮಟ್ಟ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ಮೂಲಭೂತ ಸೌಕರ್ಯಗಳಾದ ಕೊಠಡಿ, ಬೆಂಚು, ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಸೌಲಭ್ಯ, ಕ್ರೀಡಾ ಪರಿಕರಗಳನ್ನು ಒದಗಿಸಬೇಕು. ಪ್ರತಿ ಶಾಲೆಗೆ ಒಬ್ಬರು ಪರಿಚಾರಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಶಾಲೆಯ ಸ್ಥಿತಿಗತಿ ಕುರಿತು ಡಿಡಿಪಿಐ ಶ್ವೇತಪತ್ರ ಹೊರಡಿಸಬೇಕು. ಈ ಬಗ್ಗೆ ಕೆಕೆಆರ್‌ಡಿಬಿ ಮತ್ತು ಪ್ರಾದೇಶಿಕ ಶಿಕ್ಷಣ ಆಯುಕ್ತರು ಎರಡು ತಿಂಗಳಲ್ಲಿ ತೆಗೆದುಕೊಂಡ ಕ್ರಮಗಳ ವರದಿ ಸಲ್ಲಿಸಬೇಕು. ಮುಖ್ಯಮಂತ್ರಿ, ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ಶಾಲೆಗಳ ಸುಧಾರಣೆಗೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.